ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕೆಪಿಎಸ್‌ ಶಾಲೆಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

Madhu Bangarappa: ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕೆಪಿಎಸ್‌ ಶಾಲೆಗಳನ್ನು ಸ್ಥಾಪಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Nov 26, 2026 - 13:51
Nov 26, 2026 - 13:51
ಎರಡು ತಿಂಗಳಲ್ಲಿ ರಾಜ್ಯಾದ್ಯಂತ 1,300 ಕೆಪಿಎಸ್‌ ಶಾಲೆಗಳ ಸ್ಥಾಪನೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಮುಂದಿನ ಎರಡು ತಿಂಗಳ ಅವಧಿಯಲ್ಲಿ ರಾಜ್ಯಾದ್ಯಂತ 1,300 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು (ಕೆಪಿಎಸ್‌) ಸ್ಥಾಪಿಸುವ ಗುರಿ ಹೊಂದಿದ್ದು, ಈ ಶಾಲೆಗಳ ನಿರ್ಮಾಣದ ಮೂಲಕ ಕರ್ನಾಟಕವು ಶೈಕ್ಷಣಿಕವಾಗಿ ದೇಶದಲ್ಲೇ ಗಮನ ಸೆಳೆಯಲಿದೆ ಎಂದು ಶಿಕ್ಷಣ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಬಿಐಇಸಿ ಸಭಾಂಗಣದಲ್ಲಿ ಬುಧವಾರ 'ಇಂಡಿಯಾ ಡೈಡ್ಯಾಕ್' ಆಯೋಜಿಸಿದ್ದ ಟೈಸ್‌ (TIEES) ಅಂತರರಾಷ್ಟ್ರೀಯ ಶಿಕ್ಷಣ & ಕೌಶಲ್ಯ ಕುರಿತ ಸಮ್ಮೇಳನ ಮತ್ತು ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳ ಕಲಿಕೆಯ ಗುಣಮಟ್ಟ ಸುಧಾರಣೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಕೆಪಿಎಸ್‌ ಶಾಲೆಗಳಲ್ಲಿ ಪ್ರತಿಯೊಂದು ವಿಷಯಕ್ಕೂ ನುರಿತ ಶಿಕ್ಷಕರನ್ನು ನೇಮಿಸಲಾಗುವುದು. ಮೂರನೇ ತರಗತಿಯಿಂದಲೇ ಕೃತಕ ಬುದ್ಧಿಮತ್ತೆ (ಎಐ) ಶಿಕ್ಷಣ ನೀಡಲಾಗುವುದು. ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್‌ ಕಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಕೆಪಿಎಸ್‌ ಶಾಲೆಗಳ ಅಭಿವೃದ್ಧಿಗೆ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ಎಡಿಬಿ) ಸಾಲ ನೀಡುತ್ತಿದ್ದು, ರಾಜ್ಯ ಸರ್ಕಾರದ ಅನುದಾನ ಸೇರಿದಂತೆ ಒಟ್ಟು ರೂ.4,500 ಕೋಟಿ ವೆಚ್ಚದಲ್ಲಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಎಲ್‌ಕೆಜಿಯಿಂದ ಪಿಯುಸಿವರೆಗೆ ಒಂದೇ ಕ್ಯಾಂಪಸ್‌ನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲಿದೆ. ಪ್ರತಿಯೊಂದು ಕೆಪಿಎಸ್‌ ಶಾಲೆಗೂ ಸರ್ಕಾರದ ವತಿಯಿಂದ ಉಚಿತ ಬಸ್‌ ಸೌಲಭ್ಯ ಕಲ್ಪಿಸುವ ಉದ್ದೇಶವಿದೆ ಎಂದರು.

ಸಂಗೀತ, ರಂಗಭೂಮಿ ಮತ್ತು ಮಾನವೀಯ ಮೌಲ್ಯಗಳಿಗೂ ಒತ್ತು:

ಶೈಕ್ಷಣಿಕ ವಿಷಯಗಳ ಬೋಧನೆಯ ಜೊತೆಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಸಂಗೀತ ಮತ್ತು ರಂಗಭೂಮಿ ಶಿಕ್ಷಕರನ್ನು ಕೆಪಿಎಸ್‌ ಶಾಲೆಗಳಲ್ಲಿ ಒದಗಿಸಲಾಗುವುದು. ನಮ್ಮದು ಸಂಸ್ಕೃತಿಯನ್ನು ಗೌರವಿಸುವ ದೇಶ. ಅದರಲ್ಲೂ ದಕ್ಷಿಣ ಭಾರತದಲ್ಲಿ ಸಂಸ್ಕೃತಿ ಮತ್ತು ಪರಂಪರೆಗೆ ವಿಶೇಷ ಗೌರವವಿದೆ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದಕ್ಕೂ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಹೇಳಿದರು.

ತಮ್ಮ ಇಲಾಖೆಯ ವ್ಯಾಪ್ತಿಯಲ್ಲಿ 46 ಸಾವಿರ ಸರ್ಕಾರಿ ಶಾಲೆಗಳಿದ್ದು, ಎಲ್ಲ ಶಾಲೆಗಳ ಮಕ್ಕಳು ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಪ್ರತಿದಿನ ಓದುವುದನ್ನು ಕಡ್ಡಾಯಗೊಳಿಸಲಾಗಿದೆ. ಇಂದು ಮಕ್ಕಳು ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿಯದೆಯೇ ನಿರರ್ಗಳವಾಗಿ ಪ್ರಸ್ತಾವನೆಯನ್ನು ಓದುತ್ತಿದ್ದಾರೆ. ಸಂವಿಧಾನವೇ ಶ್ರೇಷ್ಠ ಎಂಬ ಭಾವನೆಯನ್ನು ಮಕ್ಕಳಲ್ಲಿ ಬೆಳೆಸಲಾಗುತ್ತಿದೆ ಎಂದು ತಿಳಿಸಿದರು.

ಶಿಕ್ಷಣದೊಂದಿಗೆ ಕೌಶಲ್ಯಾಭಿವೃದ್ಧಿ:

ಮಕ್ಕಳಲ್ಲಿ ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪ್ರೌಢಶಿಕ್ಷಣ ಪೂರ್ಣಗೊಳಿಸುವ ವೇಳೆಗೆ ಪ್ರತಿಯೊಬ್ಬ ವಿದ್ಯಾರ್ಥಿಗೂ ಭವಿಷ್ಯದಲ್ಲಿ ಸ್ವಾವಲಂಬಿಯಾಗಿ ಬದುಕಲು ಹಾಗೂ ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯಗಳನ್ನು ಕಲಿಸುವ ವಾತಾವರಣ ನಿರ್ಮಿಸಲಾಗುತ್ತಿದೆ. ಇದರಿಂದ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಉದ್ಯೋಗಾವಕಾಶಗಳನ್ನು ಸುಲಭವಾಗಿ ಪಡೆಯಲು ಸಹಕಾರಿಯಾಗಲಿದೆ ಎಂದು ಸಚಿವರು ಹೇಳಿದರು.

ಶೃಂಗಸಭೆಯಲ್ಲಿ ಮಾಲ್ದೀವ್ಸ್ ಗಣರಾಜ್ಯದ ಉನ್ನತ ಶಿಕ್ಷಣ ಸಚಿವ ಅಹಮದ್‌ ಶೆಫ್ಯೂ, ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌, ಪ್ರಸಿದ್ಧ ಆಧ್ಯಾತ್ಮಿಕ ಗುರು, 'ಆರ್ಟ್ ಆಫ್ ಲಿವಿಂಗ್ ಫೌಂಡೇಶನ್' ಸಂಸ್ಥೆಯ ರವಿಶಂಕರ್, ಮಾಜಿ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಮುಖ್ಯ ಸಚೇತಕ ಮಂಜುನಾಥ ಭಂಡಾರಿ ಉಪಸ್ಥಿತರಿದ್ದರು. 

'ಶಿಕ್ಷಣದಲ್ಲಿ ಯಶಸ್ಸ ಪಡೆಯುವುದು' (Building Success in Education) ಎಂಬ ವಿಷಯದ ಮೊದಲ ಗೋಷ್ಠಿಯನ್ನು ಲಂಡನ್‌ ಎಜುಕೇಷನ್‌ ಫೋರಂ ಅಧ್ಯಕ್ಷ ಡೊಮಿನಿಕ್‌ ಸಾವೇಜ್‌ ನಡೆಸಿಕೊಟ್ಟರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.