ಸುಸೂತ್ರವಾಗಿ ನಡೆದ ದ.ಕ. ಸ್ಥಳೀಯ ಸಂಸ್ಥೆಗಳ ಪರಿಷತ್‌ ಉಪ ಚುನಾವಣೆ; 24ರಂದು ಮತ ಎಣಿಕೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

ಅ.24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

Oct 21, 2024 - 18:01
Oct 21, 2024 - 18:07
 34
ಸುಸೂತ್ರವಾಗಿ ನಡೆದ ದ.ಕ. ಸ್ಥಳೀಯ ಸಂಸ್ಥೆಗಳ ಪರಿಷತ್‌ ಉಪ ಚುನಾವಣೆ; 24ರಂದು ಮತ ಎಣಿಕೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ನ ಉಪ ಚುನಾವಣೆ ಸೋಮವಾರ ಸುಸೂತ್ರವಾಗಿ ನಡೆದಿದ್ದು, ಅ.24ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾನೂನು ವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅ.24ರಂದು ಬೆಳಿಗ್ಗೆ 5 ಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆ ಕೇಂದ್ರ ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನ ಸುತ್ತ 500 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಐದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು, ತಿರುಗಾಡುವುದು, ಮೆರವಣಿಗೆ ಅಥವಾ ಸಭೆ/ಸಮಾರಂಭ ಮಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಮತ ಎಣಿಕೆ ಕೇಂದ್ರದ ಆವರಣದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ಪಾದಚಾರಿ ವಲಯ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ವಾಹನಗಳಿಗೆ ಪ್ರವೇಶ ಮತ್ತು ಪಾರ್ಕಿಂಗ್‌ ಮಾಡಲು ಅವಕಾಶ ಇರುವುದಿಲ್ಲ. ಮತ ಎಣಿಕೆ ಕೇಂದ್ರದ 200 ಮೀಟರ್ ಅಂತರದಲ್ಲಿ ಮೊಬೈಲ್ ಫೋನ್‌, ಕಾರ್ಡ್ ಲೆಸ್ ಫೋನ್ ಅಥವಾ ಇನ್ನಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನುನಿಷೇಧಿಸಲಾಗಿದೆ.

ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಚುನಾವಣೆಯ ಮತ ಎಣಿಕೆ ಫಲಿತಾಂಶದ ಸಮಯದಲ್ಲಿ ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಮಾರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಯಾವುದೇ ಸ್ಫೋಟ ವಸ್ತುಗಳನ್ನು ಹೊಂದುವುದನ್ನು ನಿಷೇಧಿಸಿದೆ.

ಯಾವುದೇ ವ್ಯಕ್ತಿ ಬಹಿರಂಗವಾಗಿ ಮಾರಕಾಸ್ತ್ರಗಳು, ಸ್ಫೋಟಕ ವಸ್ತುಗಳು, ವಿನಾಶ ಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿರುವುದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೆÇಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು. ಹಾಗೂ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಈ ಆದೇಶವು ಚುನಾವಣಾ ಕಾರ್ಯನಿರತ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.