ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರಿಗೆ ಭರ್ಜರಿ ಗೆಲುವು
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಧಿಕ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಅತ್ಯಧಿಕ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.
ಇಂದು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು 3654 ಮತಗಳನ್ನು ಪಡೆದುಕೊಂಡಿದ್ದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರು 1952 ಮತಗಳನ್ನು ಪಡೆದುಕೊಂಡಿದ್ದಾರೆ. ಎಸ್‌ಡಿಪಿಪಿ ಅಭ್ಯರ್ಥಿ 195 ಹಾಗೂ ಪಕ್ಷೇತರ ಅಭ್ಯರ್ಥಿ ದಿನಕರ್ ಅವರು 9 ಮತಗಳನ್ನು ಪಡೆದಿದ್ದಾರೆ. ಆ ಮೂಲಕ ಕಿಶೋರ್ ಕುಮಾರ್ ಅವರು 1704 ಮತಗಳ ಅಂತರದಿಂದ ಗೆದ್ದು, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಗೆಲುವು ಸಾಧಿಸುತ್ತಿದ್ದಂತೆ ಮತ ಎಣಿಕೆ ನಡೆಯುತ್ತಿದ್ದ ಅಲೋಶಿಯಸ್ ಕಾಲೇಜು ಬಳಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಡಾ.ವೈ. ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಇತರೆ ನಾಯಕರು ಕೂಡ ಗೆಲುವಿನ ನಗೆ ಬೀರಿದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅಭಿನಂದನೆಯನ್ನು ಸಲ್ಲಿಸುವ ಮೂಲಕ ವಿಜಯೋತ್ಸವ ಆಚರಿಸಿಕೊಂಡರು.
ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನವು ತೆರವಾಗಿತ್ತು. ಅ.21ರಂದು ಈ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನಡೆದಿದ್ದು, ಒಟ್ಟು 5906 ಮತಗಳು ಚಲಾವಣೆಯಾಗಿದ್ದವು. ಆ ಪೈಕಿ 5819 ಮತಗಳು ಸಿಂಧು ಎನಿಸಿದ್ದವು.
ಕಳೆದ ಬಾರಿ ದ.ಕ. ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು 3672, ಮಂಜುನಾಥ ಭಂಡಾರಿ ಅವರು 2079, ಎಸ್‌ಡಿಪಿಐ ಅಭ್ಯರ್ಥಿ 204 ಮತಗಳನ್ನು ಪಡೆದುಕೊಂಡಿದ್ದರು. ಆ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು 1593 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಕಿಶೋರ್ ಕುಮಾರ್ ಪುತ್ತೂರು ಯಾರು?
ಆರ್‌ಎಸ್‌ಎಸ್ ಹಿನ್ನಲೆಯಿಂದ ಬಂದಿರುವ ಕಿಶೋರ್ ಕುಮಾರ್ ಅವರು ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದಾರೆ. ಪುತ್ತೂರು ವಿವೇಕಾನಂದ ಕಾಲೇಜಿನ ಹಳೇ ವಿದ್ಯಾರ್ಥಿಯಾಗಿರುವ ಕಿಶೋರ್ ಕುಮಾರ್ ಅವರು ಶೈಕ್ಷಣಿಕವಾಗಿಯೂ ಹೆಚ್ಚಿನ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ಸದ್ಯ ಬಿಜೆಪಿ ಪಕ್ಷದಲ್ಲಿ ಸಕ್ರಿಯ ನಾಯಕರಾಗಿ ಗುರುತಿಸಿಕೊಂಡಿರುವ ಅವರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೂಡ ಆಗಿದ್ದಾರೆ. ಇದೀಗ ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜ್ಯ ರಾಜಕಾರಣಕ್ಕೆ ಪ್ರವೇಶ ಪಡೆದುಕೊಂಡಿದ್ದಾರೆ.