ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ
13 ಮಂದಿ ಸಚಿವರನ್ನು ಒಳಗೊಂಡ ನೂತನ ಸಂಪುಟ ಅಸ್ತಿತ್ವಕ್ಕೆ. ಡಾ.ಜಿ.ಪರಮೇಶ್ವರ ಡಿಸಿಎಂ ಆಗಿ ಅಧಿಕಾರ ಸ್ವೀಕಾರ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಹ ಸಂಪುಟದಲ್ಲಿ ಸ್ಥಾನ
ಬೆಂಗಳೂರು, ಜೂನ್ 3: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಇಲ್ಲಿನ ಲೋಕಭವನದ ಗಾಜಿನ ಮನೆಯಲ್ಲಿ ಅಧಿಕಾರ ಸ್ವೀಕರಿಸಿದರು.
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣಪಚನ ಬೋಧಿಸಿದರು. ಡಿಕೆಶಿ ಅವರು ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಅವರ ಕೈಯಲ್ಲಿ ಸಂವಿಧಾನ ಪುಸ್ತಕವೂ ಇತ್ತು.
ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ ಅವರು ಪ್ರಮಣವಚನ ಸ್ವೀಕರಿಸಿದರು. ಉಳಿದಂತೆ ಸಚಿವರಾಗಿ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಈಶ್ವರ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶಗಳ ಮುಖ್ಯಮಂತ್ರಿಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಇತರರು ಇದ್ದರು.


