ಚನ್ನಪಟ್ಟದಲ್ಲಿ ಯೋಗೇಶ್ವರ್ ಸ್ಪರ್ಧೆಗೆ ಯಾರ ವಿರೋಧ-ಅಸಮಾಧಾನವೂ ಇಲ್ಲ ಎಂದ ಡಿಕೆ ಬ್ರದರ್ಸ್
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಟಿಕೆಟ್ ನೀಡಿರುವುದಕ್ಕೆ ಕ್ಷೇತ್ರದಲ್ಲಿ ಯಾರಿಗೂ ಯಾವುದೇ ಅಸಮಾಧಾನಗಳು ಇಲ್ಲ
ಬೆಂಗಳೂರು: ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಟಿಕೆಟ್ ನೀಡಿರುವುದಕ್ಕೆ ಕ್ಷೇತ್ರದಲ್ಲಿ ಯಾರಿಗೂ ಯಾವುದೇ ಅಸಮಾಧಾನಗಳು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪತ್ರಿಕ್ರಿಯಿಸಿದ ಅವರು, ಚನ್ನಪಟ್ಟಣದಲ್ಲಿ ಕ್ಷೇತ್ರದಲ್ಲಿ ಯಾರಿಗೂ ಅಸಮಾಧಾನವಿಲ್ಲ. ಡಿಕೆ ಸುರೇಶ್, ನಾನು ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧ. ಡಿಕೆ ಸುರೇಶ್ ಅವರೇ ಚನ್ನಪಟ್ಟಣದ ಜವಾಬ್ದಾರಿ ವಹಿಸಿಕೊಂಡು ಈ ಚುನಾವಣೆಯಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಶಿಂಗ್ಗಾವಿ ಕ್ಷೇತ್ರದಲ್ಲಿ ಪಕ್ಷದಿಂದ ಆಂತರಿಕ ಸಮೀಕ್ಷೆ ನಡೆಯುತ್ತಿರುವ ಕಾರಣ ಟಿಕೆಟ್ ಘೋಷಣೆ ಸ್ವಲ್ಪ ವಿಳಂಬವಾಗುತ್ತಿದೆ. ಆದರೆ, ಪಕ್ಷದ ಅನುಕೂಲದ ದೃಷ್ಟಿಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇನ್ನೊಂದೆಡೆ ಮಾಜಿ ಸಂಸದ ಡಿಕೆ ಸುರೇಶ್ ಅವರು ಮಾತನಾಡಿ, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಟಿಕೆಟ್ ನೀಡಿರುವುದಕ್ಕೆ ಯಾರಿಗೂ ಯಾವುದೇ ಅಸಮಾಧಾನವಿಲ್ಲ. ಕ್ಷೇತ್ರದಲ್ಲಿ ಒಬ್ಬೊಬ್ಬರಿಗೂ ಒಂದೊಂದು ರೀತಿಯ ಅಭಿಪ್ರಾಯಗಳು ಇರುವುದು ಸಹಜ. ಆದರೆ, ನಾವೆಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ. ಪಕ್ಷ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಆ ಪ್ರಕಾರ ಕ್ಷೇತ್ರದಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.