ಭಾರತ-ನ್ಯೂಜಿಲೆಂಡ್ ಮುಕ್ತ ವ್ಯಾಪಾರ ಒಪ್ಪಂದ ಅಂತಿಮ

Dec 22, 2025 - 16:51

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಮಾತುಕತೆಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ, ಈ ಐತಿಹಾಸಿಕ ಒಪ್ಪಂದವನ್ನು ಜಂಟಿಯಾಗಿ ಘೋಷಿಸಿದ್ದಾರೆ. 2025ರ ಮಾರ್ಚ್‌ನಲ್ಲಿ ಪ್ರಾರಂಭವಾದ ಮಾತುಕತೆಗಳು ಕೇವಲ ಒಂಬತ್ತು ತಿಂಗಳಲ್ಲಿ ಪೂರ್ಣಗೊಂಡಿರುವುದು ಎರಡೂ ದೇಶಗಳ ನಡುವಿನ ಬಲವಾದ ರಾಜಕೀಯ ಇಚ್ಛಾಶಕ್ತಿ ಮತ್ತು ಹಂಚಿಕೊಂಡ ಆಕಾಂಕ್ಷೆಯನ್ನು ಪ್ರತಿಬಿಂಬಿಸುತ್ತದೆ ಎಂದು ಇಬ್ಬರು ನಾಯಕರು ಅಭಿಪ್ರಾಯಪಟ್ಟಿದ್ದಾರೆ.

ಈ ಒಪ್ಪಂದದಂತೆ ಭಾರತಕ್ಕೆ ರಫ್ತಾಗುವ ನ್ಯೂಜಿಲೆಂಡ್‌ನ ಶೇ.95ರಷ್ಟು ಸರಕುಗಳ ಮೇಲಿನ ಸುಂಕವನ್ನು ಕಡಿತಗೊಳಿಸಲಾಗಿದೆ ಅಥವಾ ಪೂರ್ಣವಾಗಿ ತೆಗೆದುಹಾಕಲಾಗಿದೆ. ಹೀಗಾಗಿ ಮುಂದಿನ ಎರಡು ದಶಕಗಳಲ್ಲಿ ರಫ್ತು ವಾರ್ಷಿಕವಾಗಿ 1.1 ರಿಂದ 1.3 ಬಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಜೊತೆಗೆ ಮುಂದಿನ ಐದು ವರ್ಷಗಳಲ್ಲಿ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರವನ್ನು ದ್ವಿಗುಣಗೊಳಿಸುವ ಗುರಿಯನ್ನು ಹೊಂದಿದೆ. ಮುಂದಿನ 15 ವರ್ಷಗಳಲ್ಲಿ ನ್ಯೂಜಿಲೆಂಡ್‌ನಿಂದ ಭಾರತಕ್ಕೆ 20 ಬಿಲಿಯನ್ ಡಾಲರ್ ಹೂಡಿಕೆಯನ್ನು ಆಕರ್ಷಿಸುವ ಯೋಜನೆ ಹೊಂದಿದೆ ಎಂದು ತಿಳಿದುಬಂದಿದೆ.

ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರು ಈ ಕುರಿತು ಪೋಸ್ಟ್ ಹಂಚಿಕೊಂಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ ನಂತರ ನ್ಯೂಜಿಲೆಂಡ್-ಭಾರತ ನಡುವಿನ ಮುಕ್ತ ವ್ಯಾಪಾರ ಒಪ್ಪಂದ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಮೂಲಕ ಭಾರತಕ್ಕೆ ರಫ್ತಾಗುವ ನ್ಯೂಜಿಲೆಂಡ್‌ನ ಶೇ.95ರಷ್ಟು ಸರಕುಗಳ ಮೇಲಿನ ಸುಂಕವನ್ನು ಕಡಿತಗೊಳಿಸಲಾಗಿದೆ ಅಥವಾ ಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದಾರೆ.  ಈ ಒಪ್ಪಂದವು ಎರಡೂ ದೇಶಗಳ ವ್ಯಾಪಾರ, ಹೂಡಿಕೆ, ನಾವೀನ್ಯತೆ ಮತ್ತು ಜನರ ನಡುವಿನ ಸಂಪರ್ಕವನ್ನು ಬಲಪಡಿಸಲಿದೆ.