ಸಚಿವ ನಾಗೇಂದ್ರ ರಾಜೀನಾಮೆ ಕೊಡದಿದ್ದರೆ, ಸದನ ನಡೆಯಲು ಬಿಡುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Chalavadi Narayanaswamy Press Meet: ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನದಲ್ಲಿ' ಇಂದು (ಗುರುವಾರ) ಸುದ್ದಿಗೋಷ್ಠಿಯಲ್ಲಿ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿದರು.

Aug 6, 2026 - 16:00
ಸಚಿವ ನಾಗೇಂದ್ರ ರಾಜೀನಾಮೆ ಕೊಡದಿದ್ದರೆ, ಸದನ ನಡೆಯಲು ಬಿಡುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: 'ನೂತನ ಸಚಿವ ನಾಗೇಂದ್ರ ಮೇಲೆ ಈಗಲೂ ಕೋರ್ಟ್‌ನಲ್ಲಿ ಮೊಕದ್ದಮೆ ಇದೆ. ಅವರು, ದೆಹಲಿಗೂ ಹೋಗುವಂತಿಲ್ಲ. ಇಂಥ ಕಳಂಕಿತರು ಮಂತ್ರಿಮಂಡಲದಲ್ಲಿ ಇರಲು ಸಾಧ್ಯವಿಲ್ಲ. ರಾಜೀನಾಮೆ ಕೊಡುವವರೆಗೆ ನಾವು ಸುಮ್ಮನಿರುವುದಿಲ್ಲ' ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಎಚ್ಚರಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನದಲ್ಲಿ' ಇಂದು (ಗುರುವಾರ) ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 

'ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈ ವಿಚಾರವಾಗಿ ರಾಜ್ಯಾದ್ಯಂತ ಹೋರಾಟ ಮಾಡಲಿದ್ದಾರೆ. ಆಗಸ್ಟ್ 13 ರಿಂದ ಅಧಿವೇಶನ ಶುರುವಾಗಲಿದೆ. ಅವರ ರಾಜೀನಾಮೆ ಇಲ್ಲದೇ, ನಾವು ಸದನ ನಡೆಸಲು ಬಿಡುವುದಿಲ್ಲ ಎಂದು ಹೇಳಿದರು.

ವಾಲ್ಮೀಕಿ ನಿಗಮ ಹಗರಣ ಸಂಬಂಧ, ಬಿಜೆಪಿ ಮುಖಂಡರು ಹಾಗೂ ಶಾಸಕರ ಹೋರಾಟದ ಫಲವಾಗಿ ನಾಗೇಂದ್ರ ರಾಜೀನಾಮೆ ನೀಡಿದ್ದರು. ಜೈಲಿಗೂ ಹೋಗಿದ್ದರು. ಇವತ್ತಿಗೂ ಜಾಮೀನಿನ ಮೇಲೆ ಇದ್ದಾರೆ. ಆದರೂ ಅವರಿಗೆ ಕಾಂಗ್ರೆಸ್ ಪಕ್ಷ ಉಡುಗೊರೆಯಾಗಿ ಮಂತ್ರಿ ಸ್ಥಾನವನ್ನು ನೀಡಿದೆ ಎಂದು ಟೀಕಿಸಿದರು.

ಮೊನ್ನೆಯಷ್ಟೇ ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆ ಆಗಿದೆ. ಆ ಪಕ್ಷವು ಸಚಿವ ಸ್ಥಾನವನ್ನು ಹರಾಜಿಗೆ ಇಟ್ಟಿತ್ತು. ಇದಕ್ಕೆ ಪುರಾವೆಯಾಗಿ ವಿಡಿಯೋಗಳು ಓಡಾಡುತ್ತಿವೆ ಎಂದರು.

ಲೂಟಿ ಮಾಡಲು ಬಂದರೆ ಸಾಕೆಂಬ ಉದ್ದೇಶ?

ಹಲವರಿಗೆ ಕನ್ನಡದಲ್ಲಿ ಸ್ವಚ್ಛವಾಗಿ ಪ್ರಮಾಣವಚನ ಸ್ವೀಕರಿಸಲು ಆಗಲಿಲ್ಲ. ಇಂಥವರನ್ನೆಲ್ಲ ಸಚಿವರನ್ನಾಗಿ ಮಾಡಿದ್ದಾರೆ. ಭಾಷೆ ಬರದಿದ್ದರೂ ಪರವಾಗಿಲ್ಲ, ಸರಿಯಾಗಿ ಲೂಟಿ ಮಾಡಲು ಬಂದರೆ ಸಾಕೆಂಬ ಉದ್ದೇಶವೇ ಎಂದು ಕೇಳಿದರು.

ಎಐಸಿಸಿ ಅಧ್ಯಕ್ಷರು ಆಟಕ್ಕುಂಟು ಲೆಕ್ಕಕ್ಕಿಲ್ಲ:

ಇಲ್ಲಿಂದ ಹೋದವರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಾರೆ. ಆದರೆ, ಎಐಸಿಸಿ ಅಧ್ಯಕ್ಷರನ್ನು ಭೇಟಿಯಾಗುವುದಿಲ್ಲ. ಅಧ್ಯಕ್ಷರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ಟೀಕಿಸಿದರು. 

ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಹಾಗೂ ರಾಜ್ಯ ಕಾರ್ಯದರ್ಶಿ ಮಹಂತೇಶ್ ನಾಯಕ ಇದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.