B.Y.Vijayendra: ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಬಿ.ವೈ.ವಿಜಯೇಂದ್ರ ಹೇಳಿಕೆ

B.Y.Vijayendra: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಪಂಗಿರಾಮನಗರದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ದೇವಾಂಗ ಸಮಾಜದ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ 136ನೇ 'ಮನ್ ಕಿ ಬಾತ್'ನ್ನು ವೀಕ್ಷಿಸಿದರು.

Jul 26, 2026 - 19:36
B.Y.Vijayendra: ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಬಿ.ವೈ.ವಿಜಯೇಂದ್ರ ಹೇಳಿಕೆ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಸಂಪಂಗಿರಾಮನಗರದಲ್ಲಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ದೇವಾಂಗ ಸಮಾಜದ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ 136ನೇ 'ಮನ್ ಕಿ ಬಾತ್'ನ್ನು ವೀಕ್ಷಿಸಿದರು. 

ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿಮಂತ್ರಿಗಳು ದೇಶದ ವಿವಿಧ ಕ್ಷೇತ್ರಗಳ ಸಾಧಕರನ್ನು ಸ್ಮರಿಸುವುದರೊಂದಿಗೆ, ಜನರಲ್ಲಿ ಸಕಾರಾತ್ಮಕ ಮನೋಭಾವ ಬೆಳೆಸುವ ಅಪರೂಪದ ಕಾರ್ಯಕ್ರಮವನ್ನು ನಡೆಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕಾರ್ಗಿಲ್ ವೀರರ ತ್ಯಾಗ, ಕ್ರೀಡಾ ಸಾಧನೆ & ಯುವ ಪ್ರತಿಭೆಗೆ ಪ್ರಧಾನಿ ಗೌರವ:

ಪ್ರಧಾನಿ ನರೇಂದ್ರ ಮೋದಿ ಅವರು 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರನ್ನು ಸ್ಮರಿಸಿರುವುದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ವಿಷಯವಾಗಿದೆ. ಲಾರ್ಡ್ಸ್ ಮೈದಾನದಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ, ಜಪಾನ್‌ನಲ್ಲಿ ಪಿ.ವಿ.ಸಿಂಧು ಚಿನ್ನದ ಪದಕ ಗೆದ್ದಿರುವುದು ಮತ್ತು ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳು ಸಾಧಿಸಿರುವ ಯಶಸ್ಸನ್ನು ವಿಶೇಷವಾಗಿ ಉಲ್ಲೇಖಿಸಿ ಅಭಿನಂದಿಸಿರುವುದು ಯುವಜನತೆಗೆ ಸ್ಫೂರ್ತಿದಾಯಕವಾಗಿದೆ ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ:

ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ, ರಾಜ್ಯದ ಎಲ್ಲಾ ಜ್ವಲಂತ ಸಮಸ್ಯೆಗಳ ಕುರಿತು ಬಿಜೆಪಿ-ಜೆಡಿಎಸ್ ಒಗ್ಗಟ್ಟಿನಿಂದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಲಿದೆ ಎಂದು ತಿಳಿಸಿದರು.

ಪಕ್ಷದ ಎಲ್ಲಾ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು. ವಿ.ಪಕ್ಷ ನಾಯಕರೊಂದಿಗೆ ಚರ್ಚಿಸಿ ಅಧಿವೇಶನದ ಕಾರ್ಯತಂತ್ರ ರೂಪಿಸಲಾಗುವುದು. ಕನಕಪುರದಲ್ಲಿ ಪ್ರಸ್ತಾಪಿಸಿರುವ ವಿಮಾನ ನಿಲ್ದಾಣ ಯೋಜನೆ, ರಾಜ್ಯದ ಬರ ಪರಿಸ್ಥಿತಿ ಸೇರಿದಂತೆ ಜನಜೀವನಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗುವುದು ಎಂದರು.

ನೀಟ್ ವಿಚಾರದಲ್ಲಿ ರಾಜಕೀಯ ಬೇಡ - ಪಾರದರ್ಶಕ ತನಿಖೆಗೆ ಬಿಜೆಪಿ ಬದ್ಧ:

ನೀಟ್ ಪರೀಕ್ಷೆ ವಿಚಾರವನ್ನು ರಾಜಕೀಯವಾಗಿ ಬಳಸಿಕೊಂಡು, ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವು ಶಕ್ತಿಗಳು ಪ್ರಯತ್ನಿಸಿದ್ದವು. ಅಂತಹ ಪ್ರಯತ್ನಗಳಿಗೆ ಅವಕಾಶ ನೀಡಬಾರದು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿಲುವಾಗಿದೆ ಎಂದು ಹೇಳಿದರು.

ಈ ಘಟನೆಯ ಬಗ್ಗೆ ಸಂಪೂರ್ಣ ಪಾರದರ್ಶಕ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ಸತ್ಯಾಂಶ ಹೊರಬರಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿಗೆ ಉನ್ನತ ಶಿಕ್ಷಣ ಖಾತೆ - ದೇಶಕ್ಕೆ ಲಾಭವಾಗುವ ವಿಶ್ವಾಸ:

ಕೇಂದ್ರ ಸಚಿವ ಸಂಪುಟದಲ್ಲಿ ಉನ್ನತ ಶಿಕ್ಷಣದಂತಹ ಮಹತ್ವದ ಜವಾಬ್ದಾರಿ ಕರ್ನಾಟಕದ ಹಿರಿಯ ನಾಯಕ ಪ್ರಹ್ಲಾದ್ ಜೋಶಿ ಅವರಿಗೆ ದೊರೆತಿರುವುದು ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದರು.

ಸಂಸದೀಯ ವ್ಯವಹಾರಗಳ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಅನುಭವ ಅವರಿಗಿದೆ. ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಅಗತ್ಯ ಸುಧಾರಣೆಗಳನ್ನು ತಂದು, ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸುವಲ್ಲಿ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ. ಇದರ ಲಾಭ ದೇಶ ಮತ್ತು ಕರ್ನಾಟಕಕ್ಕೂ ದೊರೆಯಲಿದೆ ಎಂದು ಹೇಳಿದರು.