ಕರ್ನಾಟಕದ ಬರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು: ಡಿಸಿಎಂ ಡಾ.ಜಿ.ಪರಮೇಶ್ವರ

Dr.G.Parameshwara: ಕರ್ನಾಟಕದ ಬರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ಅವರು ಒತ್ತಾಯಿಸಿದ್ದಾರೆ.

Nov 23, 2026 - 16:11
Nov 23, 2026 - 16:12
ಕರ್ನಾಟಕದ ಬರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು: ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು: ಕರ್ನಾಟಕದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ತಕ್ಷಣ ಸ್ಪಂದಿಸಬೇಕು. ರಾಜ್ಯ ಸರ್ಕಾರ ಕೇಳಿರುವ ಬರ ಪರಿಹಾರದ ಹಣವನ್ನು ವಿಳಂಬ ಮಾಡದೆ, ಬಿಡುಗಡೆ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಒತ್ತಾಯಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸೋಮವಾರ ಪ್ರತ್ಯೇಕ ಪತ್ರಗಳನ್ನು ಬರೆದಿರುವ ಅವರು, ರಾಜ್ಯದ ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೂ ಅಗತ್ಯ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬರ ಪರಿಸ್ಥಿತಿಯನ್ನು ಖುದ್ದಾಗಿ ವಿವರಿಸಲು ಮೂವರ ಭೇಟಿಗೂ ಮತ್ತೊಮ್ಮೆ ಸಮಯ ಕೇಳಿದ್ದಾರೆ.

ನ.2 ರಂದು ಈ ಹಿಂದೆ ಬರೆದಿದ್ದ ಪತ್ರಗಳನ್ನು ಉಲ್ಲೇಖಿಸಿರುವ ಡಾ.ಜಿ.ಪರಮೇಶ್ವರ ಅವರು, ಕರ್ನಾಟಕವು ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 226 ತಾಲೂಕುಗಳು ಬರದಿಂದ ಬಾಧಿತವಾಗಿದ್ದು, 57.93 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ಒಟ್ಟು ರೂ.62,481.88 ಕೋಟಿ ನಷ್ಟ ಉಂಟಾಗಿರುವುದಾಗಿ ಅಂದಾಜಿಸಲಾಗಿದೆ. ಈ ಹಿನ್ನೆಲೆ, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ರೂ.22,400.58 ಕೋಟಿ ನೆರವು ನೀಡುವಂತೆ ರಾಜ್ಯ ಸರ್ಕಾರ ಪರಿಷ್ಕೃತ ಸಮಗ್ರ ಮನವಿ ಸಲ್ಲಿಸಿದೆ ಎಂದು ವಿವರಿಸಿದ್ದಾರೆ.

ಈ ಅಂಕಿ-ಅಂಶಗಳ ಹಿಂದೆ ಲಕ್ಷಾಂತರ ರೈತ ಕುಟುಂಬಗಳ ನೋವು ಮತ್ತು ಸಂಕಷ್ಟವಿದೆ. ಬೆಳೆ ಕಳೆದುಕೊಂಡ ಅನೇಕ ರೈತರು ತಮ್ಮ ಆದಾಯದ ಮೂಲವನ್ನೇ ಕಳೆದುಕೊಂಡಿದ್ದಾರೆ. ಉಳಿತಾಯದ ಹಣವನ್ನು ಖರ್ಚು ಮಾಡಿಕೊಂಡಿದ್ದಾರೆ. ದಿನನಿತ್ಯದ ಜೀವನ ನಡೆಸಲು, ಕೃಷಿ ಸಾಲ ಮರುಪಾವತಿಸಲು ಹಾಗೂ ಮುಂದಿನ ಹಂಗಾಮಿನ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರದಿಂದ ಈಗಾಗಲೇ ಪರಿಹಾರ ಕ್ರಮ: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ತನ್ನ ಸ್ವಂತ ಸಂಪನ್ಮೂಲಗಳಿಂದ ಈಗಾಗಲೇ ಮೊದಲ ಕಂತಿನ ಬರ ಪರಿಹಾರ ಬಿಡುಗಡೆ ಮಾಡಿದೆ. ಪ್ರತಿಯೊಬ್ಬ ಅರ್ಹ ರೈತರಿಗೆ ಕನಿಷ್ಠ ರೂ.5,000 ಪರಿಹಾರ ನೀಡುವುದಾಗಿ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ಪರಿಹಾರದ ಹಣ ಬರುವವರೆಗೆ ರೈತರನ್ನು ಕಾಯಿಸಬಾರದು ಎಂಬ ಕಾರಣಕ್ಕೆ ರಾಜ್ಯ ಸರ್ಕಾರವೇ ಮೊದಲು ನೆರವಿಗೆ ಮುಂದಾಗಿದೆ. ಆದರೆ ರಾಜ್ಯದಲ್ಲಿ ಉಂಟಾಗಿರುವ ಬರದ ತೀವ್ರತೆ ಹಾಗೂ ಕೃಷಿ ಕ್ಷೇತ್ರದಲ್ಲಿನ ಭಾರಿ ನಷ್ಟವನ್ನು ಗಮನಿಸಿದರೆ, ರಾಜ್ಯ ಸರ್ಕಾರದ ಸ್ವಂತ ಸಂಪನ್ಮೂಲಗಳಿಂದ ಮಾತ್ರ ಈ ಪರಿಸ್ಥಿತಿಯನ್ನು ನಿಭಾಯಿಸುವುದು ಕಷ್ಟವಾಗಿದೆ ಎಂದಿದ್ದಾರೆ.

ಅಗತ್ಯ ಪರಿಹಾರ ದೊರೆಯದೆ ದಿನಗಳು ಕಳೆದಂತೆ ಗ್ರಾಮೀಣ ಭಾಗದ ಕುಟುಂಬಗಳ ಸಂಕಷ್ಟ ಮತ್ತಷ್ಟು ಹೆಚ್ಚಾಗುತ್ತಿದೆ. ಇದರಿಂದ ರೈತರು ಆರ್ಥಿಕವಾಗಿ ಮತ್ತೆ ಚೇತರಿಸಿಕೊಳ್ಳುವುದೂ ಕಷ್ಟವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರೈತರ ಸಂಕಷ್ಟದ ವಿಚಾರದಲ್ಲಿ ರಾಜಕೀಯ ಬೇಡ:  ಕೇಂದ್ರ ಸರ್ಕಾರದ ನಡೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಡಾ.ಜಿ.ಪರಮೇಶ್ವರ ಅವರು, ಕರ್ನಾಟಕಕ್ಕೆ ಸಂಬಂಧಿಸಿದ ಹಲವು ಪ್ರಮುಖ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ಸಹಕಾರವನ್ನು ಪದೇಪದೆ ಕೇಳಿದ್ದೇವೆ. ಆದರೆ ರಾಜ್ಯದ ಅನೇಕ ನ್ಯಾಯಯುತ ಬೇಡಿಕೆಗಳಿಗೆ ಈವರೆಗೂ ಸೂಕ್ತ ಸ್ಪಂದನೆ ದೊರೆತಿಲ್ಲ ಎಂದು ತಿಳಿಸಿದ್ದಾರೆ.

ಲಕ್ಷಾಂತರ ರೈತ ಕುಟುಂಬಗಳ ಬದುಕಿನ ಮೇಲೆ ಪರಿಣಾಮ ಬೀರಿರುವ ಇಂತಹ ಗಂಭೀರ ಸಂಕಷ್ಟದ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರ ಅಗತ್ಯ ಗಮನ ಹರಿಸದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

'ನೈಸರ್ಗಿಕ ವಿಕೋಪಗಳಿಗೆ ರಾಜಕೀಯ ಗಡಿಗಳಾಗಲಿ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಗಲಿ ಇರುವುದಿಲ್ಲ. ಇಂತಹ ಸಂದರ್ಭಗಳಲ್ಲಿ ನಾವು ಕೈಗೊಳ್ಳುವ ಕ್ರಮಗಳಲ್ಲಿಯೂ ರಾಜಕೀಯ ಭಿನ್ನಾಭಿಪ್ರಾಯಗಳಿಗೆ ಅವಕಾಶ ಇರಬಾರದು' ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಲಕ್ಷಾಂತರ ಜನರ ಬದುಕು ಮತ್ತು ಜೀವನೋಪಾಯದ ಪ್ರಶ್ನೆ ಎದುರಾದಾಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕು. ವಿಶೇಷವಾಗಿ ಇಂತಹ ಸಂಕಷ್ಟದ ಸಂದರ್ಭಗಳಲ್ಲಿ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವುದೇ ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವದ ನಿಜವಾದ ಶಕ್ತಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಗಳು ಬರಗಾಲದ ಸಂದರ್ಭದಲ್ಲಿ ತಕ್ಷಣದ ಪರಿಹಾರ ನೀಡುವುದಕ್ಕೆ ಮಾತ್ರ ಸೀಮಿತವಾಗಬಾರದು. ಒಂದು ವರ್ಷ ಮಳೆ ಕೈಕೊಟ್ಟರೆ ಇಡೀ ರೈತ ಕುಟುಂಬ ಸಾಲದ ಸುಳಿಗೆ ಸಿಲುಕುವ ಅಥವಾ ಹಲವು ವರ್ಷಗಳ ಪರಿಶ್ರಮ ವ್ಯರ್ಥವಾಗುವ ಪರಿಸ್ಥಿತಿ ಬರಬಾರದು. ಇಂತಹ ಸಂದರ್ಭಗಳಲ್ಲಿಯೂ ರೈತರು ತಮ್ಮ ಜೀವನವನ್ನು ಮುಂದುವರಿಸಲು ಸಾಧ್ಯವಾಗುವಂತೆ ಕೃಷಿ ಕ್ಷೇತ್ರವನ್ನು ಬಲಪಡಿಸಬೇಕು ಎಂದು ಹೇಳಿದ್ದಾರೆ.

ಬರ ಪರಿಹಾರ ಬಿಡುಗಡೆಗೆ ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ: ರಾಜ್ಯ ಸರ್ಕಾರ ಸಲ್ಲಿಸಿರುವ ಪರಿಷ್ಕೃತ ಬರ ಪರಿಹಾರದ ಮನವಿಗೆ ಹೆಚ್ಚಿನ ಆದ್ಯತೆ ನೀಡಿ, ಕೇಳಿರುವ ಆರ್ಥಿಕ ನೆರವಿಗೆ ಶೀಘ್ರ ಅನುಮೋದನೆ ನೀಡಬೇಕು. ಅಗತ್ಯ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಮಂತ್ರಿಗಳು ಹಾಗೂ ಇಬ್ಬರು ಕೇಂದ್ರ ಸಚಿವರನ್ನು ಡಾ.ಜಿ.ಪರಮೇಶ್ವರ ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿನ ಬರ ಪರಿಸ್ಥಿತಿ, ರೈತರು ಅನುಭವಿಸುತ್ತಿರುವ ಸಂಕಷ್ಟ ಹಾಗೂ ತುರ್ತಾಗಿ ಬೇಕಾಗಿರುವ ನೆರವಿನ ಬಗ್ಗೆ ಖುದ್ದಾಗಿ ವಿವರಿಸಲು ಸಾಧ್ಯವಾದಷ್ಟು ಬೇಗ ಭೇಟಿಗೆ ಸಮಯ ನೀಡುವಂತೆಯೂ ಮತ್ತೊಮ್ಮೆ ಮನವಿ ಮಾಡಿದ್ದಾರೆ.

ಕರ್ನಾಟಕದ ರೈತರು ದೇಶದ ಅಭಿವೃದ್ಧಿ ಹಾಗೂ ಆಹಾರ ಭದ್ರತೆಗೆ ಅಪಾರ ಕೊಡುಗೆ ನೀಡಿದ್ದಾರೆ. ಇಂತಹ ಕಷ್ಟದ ಸಂದರ್ಭದಲ್ಲಿ ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಪೂರ್ಣ ಬೆಂಬಲ ದೊರೆಯಬೇಕು ಎಂದು ಹೇಳಿದ್ದಾರೆ.

ತಾವು ಮತ್ತೊಮ್ಮೆ ಮಾಡಿರುವ ಮನವಿಯನ್ನು ಪ್ರಧಾನಮಂತ್ರಿ ಹಾಗೂ ಕೇಂದ್ರ ಸಚಿವರು ವೈಯಕ್ತಿಕವಾಗಿ ಗಮನಿಸಿ, ಸಕಾಲದಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

'ರೈತರ ಸಮಸ್ಯೆಗಳನ್ನು ಆಲಿಸಲು ಹಾಗೂ ಅವರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸಲು ಅನಗತ್ಯವಾಗಿ ವಿಳಂಬ ಮಾಡಬಾರದು. ತಮ್ಮ ಸಮಸ್ಯೆಗಳಿಗೆ ಸ್ಪಂದನೆ ದೊರೆಯುವುದಕ್ಕಾಗಿ ರೈತರು ಅನಿರ್ದಿಷ್ಟಾವಧಿಯವರೆಗೆ ಕಾಯುವ ಪರಿಸ್ಥಿತಿ ಬರಬಾರದು' ಎಂದು ಡಾ.ಜಿ.ಪರಮೇಶ್ವರ ಅವರು ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.