ಏಷ್ಯನ್ ಗೇಮ್ಸ್ ಪದಕ ವಿಜೇತರನ್ನು ಅಭಿನಂದಿಸಿ ಸಿಎಂ, ಡಿಸಿಎಂ
Asian Games-2026 Medallists: ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ & ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ವಿಧಾನಸೌಧದಲ್ಲಿ ಇಂದು ಸನ್ಮಾನಿಸಿ ಅಭಿನಂದಿಸಿದರು.
ಬೆಂಗಳೂರು: ಏಷ್ಯನ್ ಗೇಮ್ಸ್-2026ರಲ್ಲಿ ಪದಕ ಗೆದ್ದು ದೇಶ & ರಾಜ್ಯಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara), ವಿಧಾನಸೌಧದಲ್ಲಿ ಇಂದು ಸನ್ಮಾನಿಸಿ ಅಭಿನಂದಿಸಿದರು.
ಏಷ್ಯನ್ ಗೇಮ್ಸ್‌ನಲ್ಲಿ ರಾಜ್ಯದ ಕ್ರೀಡಾಪಟುಗಳು ತೋರಿದ ಸಾಧನೆಯನ್ನು ಗೌರವಿಸುವುದರೊಂದಿಗೆ, ಕರ್ನಾಟಕದ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಆರ್ಥಿಕ ಪ್ರೋತ್ಸಾಹ, ಉದ್ಯೋಗ ಭದ್ರತೆ ಹಾಗೂ ಅಂತರರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಿಗೆ ಅಗತ್ಯ ನೆರವು ಕಲ್ಪಿಸುವ ಉದ್ದೇಶದಿಂದ ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ.ಜಿ.ಪರಮೇಶ್ವರ ತಿಳಿಸಿದರು.

ಏಷ್ಯನ್ ಗೇಮ್ಸ್ ಪದಕ ವಿಜೇತರ ನಗದು ಪುರಸ್ಕಾರ ಭಾರೀ ಹೆಚ್ಚಳ:
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನೀಡಲಾಗುತ್ತಿದ್ದ ನಗದು ಪುರಸ್ಕಾರದ ಮೊತ್ತವನ್ನು ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ಹಿಂದೆ ಚಿನ್ನದ ಪದಕ ವಿಜೇತರಿಗೆ ರೂ.35 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ ರೂ.25 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ರೂ15 ಲಕ್ಷ ನಗದು ಪುರಸ್ಕಾರ ನೀಡಲಾಗುತ್ತಿತ್ತು. ಪರಿಷ್ಕೃತ ಮೊತ್ತದ ಪ್ರಕಾರ, ಚಿನ್ನದ ಪದಕ ವಿಜೇತರಿಗೆ ರೂ.1 ಕೋಟಿ, ಬೆಳ್ಳಿ ಪದಕ ವಿಜೇತರಿಗೆ ರೂ.75 ಲಕ್ಷ ಮತ್ತು ಕಂಚಿನ ಪದಕ ಗೆದ್ದರೆ ರೂ.50 ಲಕ್ಷ ನಗದು ಪುರಸ್ಕಾರ ನೀಡಲಾಗುವುದು ಎಂದು ಹೇಳಿದರು.
ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಿದ 20 ಕ್ರೀಡಾಪಟುಗಳಿಗೆ ತಲಾ ರೂ.5 ಲಕ್ಷ:
ಏಷ್ಯನ್ ಗೇಮ್ಸ್-2026ರಲ್ಲಿ ಭಾಗವಹಿಸಲು ಅರ್ಹತೆ ಪಡೆದು ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ 20 ಕ್ರೀಡಾಪಟುಗಳಿಗೆ ಇದೇ ಮೊದಲ ಬಾರಿಗೆ ತಲಾ ರೂ.5 ಲಕ್ಷ ನಗದು ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.
ರಾಜ್ಯದ ಕ್ರೀಡಾಪಟುಗಳು ಅಂತರರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವುದೇ ಮಹತ್ವದ ಸಾಧನೆಯಾಗಿದೆ. ಪದಕ ಗಳಿಸಿದವರ ಜೊತೆಗೆ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಎಲ್ಲ ಕ್ರೀಡಾಪಟುಗಳನ್ನೂ ಪ್ರೋತ್ಸಾಹಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಪದಕ ವಿಜೇತರಿಗೆ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ:
ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದ ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತ್ತು ಆಸಕ್ತ ಪದಕ ವಿಜೇತ ಕ್ರೀಡಾಪಟುಗಳನ್ನು ರಾಜ್ಯದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯ ಆಯ್ಕೆ ಸಮಿತಿಯ ಮೂಲಕ ನೇರ ನೇಮಕಾತಿ ಮಾಡಲು ಅವಕಾಶ ನೀಡಲಾಗಿದೆ ಎಂದರು.
'ಗುರಿ ಒಲಿಂಪಿಕ್ಸ್' ಯೋಜನೆಯಡಿ ತಲಾ ರೂ.10 ಲಕ್ಷ ಪ್ರೋತ್ಸಾಹಧನ:
ಒಲಿಂಪಿಕ್ಸ್‌ನಲ್ಲಿ ಕರ್ನಾಟಕದ ಕ್ರೀಡಾಪಟುಗಳ ಭಾಗವಹಿಸುವಿಕೆ ಮತ್ತು ಸಾಧನೆಯನ್ನು ಹೆಚ್ಚಿಸುವ ಉದ್ದೇಶದಿಂದ ಜಾರಿಗೊಳಿಸಿರುವ 'ಗುರಿ ಒಲಿಂಪಿಕ್ಸ್' ಯೋಜನೆಯಡಿ 2026-27ನೇ ಸಾಲಿಗೆ ಏಷ್ಯನ್ ಗೇಮ್ಸ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರ ಪೈಕಿ ಆಯ್ದ ನಾಲ್ವರು ಕ್ರೀಡಾಪಟುಗಳನ್ನು (ಎಂ.ಆರ್.ಪೂವಮ್ಮ, ಸ್ನೇಹಾ ಎಸ್.ಎಸ್, ಶ್ರೇಯಾಂಕ ಪಾಟೀಲ್, ಶಿಲ್ಪಾ ಕೆ.ಎಸ್) ಸೇರ್ಪಡೆ ಮಾಡಲಾಗಿದೆ. ಈ ಕ್ರೀಡಾಪಟುಗಳಿಗೆ ಒಲಿಂಪಿಕ್ಸ್ ಸಿದ್ಧತೆ, ತರಬೇತಿ ಹಾಗೂ ಇತರೆ ಅಗತ್ಯಗಳಿಗೆ ಪ್ರಸಕ್ತ ಸಾಲಿನಲ್ಲಿ ತಲಾ ರೂ.10 ಲಕ್ಷ ನಗದು ಪ್ರೋತ್ಸಾಹಧನ ನೀಡಲಾಗುವುದು ಡಾ.ಜಿ.ಪರಮೇಶ್ವರ ಹೇಳಿದರು.
ಸಾಧಕ ಕ್ರೀಡಾಪಟುಗಳಿಗೆ ಸರ್ಕಾರಿ ನೇಮಕಾತಿಯಲ್ಲಿ ಶೇಕಡ 2% ಮೀಸಲಾತಿ:
ಸಾಧಕ ಕ್ರೀಡಾಪಟುಗಳ ಭವಿಷ್ಯಕ್ಕೆ ಉದ್ಯೋಗ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದ ನೇರ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡ 2% ಮೀಸಲಾತಿ ನೀಡಲಾಗಿದೆ.ಈ ಕುರಿತು ಅ.3, 2026 ರಂದು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ ಎಲ್ಲ ಹಂತದ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳ ನೇರ ನೇಮಕಾತಿಯಲ್ಲಿ ಸಾಧಕ ಕ್ರೀಡಾಪಟುಗಳಿಗೆ 2% ಮೀಸಲಾತಿ ಕಲ್ಪಿಸಲಾಗಿದೆ ಎಂದರು.