Dr.G.Parameshwara: ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ
Dr.G.Parameshwara: ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ ದಿಢೀರ್ ಭೇಟಿ ನೀಡಿದರು.
ದೇವನಹಳ್ಳಿ: ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ ಸಾರ್ವಜನಿಕ ಸೇವೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ. ಸಾಮಾನ್ಯ ಜನರಿಗೆ ಸರಳ ಮತ್ತು ಸುಗಮ ಆಡಳಿತ ಒದಗಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara) ಹೇಳಿದರು.
ಇಂದು ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ, ವಿವಿಧ ವಿಭಾಗಗಳ ಕಾರ್ಯನಿರ್ವಹಣೆ, ಸಾರ್ವಜನಿಕರ ಅರ್ಜಿಗಳ ವಿಲೇವಾರಿ, ಕಂದಾಯ ದಾಖಲೆಗಳ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಒದಗಿಸುತ್ತಿರುವ ಸೇವೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಾರ್ವಜನಿಕರು ತಮ್ಮ ಕೆಲಸಗಳಿಗಾಗಿ ತಾಲೂಕು ಕಚೇರಿಗೆ ಬಂದಾಗ ಯಾವ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಅಧಿಕಾರಿಗಳು ಆ ಸಮಸ್ಯೆಗಳಿಗೆ ಹೇಗೆ ಸ್ಪಂದಿಸುತ್ತಿದ್ದಾರೆ ಹಾಗೂ ಅರ್ಜಿಗಳ ವಿಲೇವಾರಿ ಯಾವ ಹಂತದಲ್ಲಿದೆ ಎಂಬುದನ್ನು ಖುದ್ದಾಗಿ ತಿಳಿದುಕೊಳ್ಳುವ ಉದ್ದೇಶದಿಂದ ಅನಿರೀಕ್ಷಿತ ಭೇಟಿ ನೀಡಿದ್ದೇನೆ ಎಂದರು.

ದಾಖಲೆಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಅಧಿಕಾರಿ ಅಮಾನತು
ದೇವನಹಳ್ಳಿ ತಹಶೀಲ್ದಾರ್ ಕಚೇರಿಯ ಎಲ್ಲ ವಿಭಾಗಗಳಿಗೆ ಭೇಟಿ ನೀಡಿ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ್ದೇನೆ. ಈ ವೇಳೆ ಕೆಲವು ನ್ಯೂನತೆಗಳು ಕಂಡುಬಂದಿದ್ದು, ಅವುಗಳನ್ನು ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ವಿಶೇಷವಾಗಿ ದಾಖಲೆಗಳ ಕೊಠಡಿಯಲ್ಲಿ (ರೆಕಾರ್ಡ್ ರೂಂ) ಕಂದಾಯ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸದಿರುವುದು ಹಾಗೂ ದತ್ತಾಂಶಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗಮನಕ್ಕೆ ಬಂದಿದೆ. ಈ ಹಿನ್ನೆಲೆ, ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸದ ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದರು.
ಕಂದಾಯ ದಾಖಲೆಗಳು ಜನಸಾಮಾನ್ಯರ ಆಸ್ತಿ ಮತ್ತು ಹಕ್ಕುಗಳಿಗೆ ಸಂಬಂಧಿಸಿದ ಅತ್ಯಂತ ಮಹತ್ವದ ದಾಖಲೆಗಳಾಗಿವೆ. ಒಂದು ಮೂಲ ದಾಖಲೆ ಹಾಳಾದರೂ ಅದರಿಂದ ಸಂಬಂಧಪಟ್ಟ ಕುಟುಂಬಗಳಿಗೆ ತೀವ್ರ ತೊಂದರೆಯಾಗಬಹುದು. ಸ್ವಾತಂತ್ರ್ಯಪೂರ್ವ ಕಾಲದ ಮೂಲ ದಾಖಲೆಗಳೂ ಕಂದಾಯ ಇಲಾಖೆಯಲ್ಲಿದ್ದು, ಅವುಗಳನ್ನು ಅತ್ಯಂತ ಜಾಗರೂಕತೆಯಿಂದ ಸಂರಕ್ಷಿಸಬೇಕು ಎಂದರು.
ದಾಖಲೆಗಳ ಕೊಠಡಿಯಲ್ಲಿರುವ ಎಲ್ಲ ದಾಖಲೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕು. ಅವುಗಳ ಸುರಕ್ಷತೆ, ಸಂರಕ್ಷಣೆ ಹಾಗೂ ದತ್ತಾಂಶ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಹಶೀಲ್ದಾರ್ ಹಾಗೂ ಭೂದಾಖಲೆಗಳ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೇಳಿದರು.
ಬಗರ್ ಹುಕುಂ ಅರ್ಜಿಗಳ ವಿಲೇವಾರಿ ಹಾಗೂ ಪೋಡಿ ದುರಸ್ತಿ ಕಾರ್ಯ ಚುರುಕುಗೊಳಿಸಲು ಕ್ರಮ:
ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದಾರೆ. ವಿಶೇಷವಾಗಿ 18 ಕಿ.ಮೀ ವ್ಯಾಪ್ತಿಯ ನಿಯಮದಿಂದ ಕೆಲವು ಅರ್ಜಿಗಳು ತಿರಸ್ಕೃತವಾಗಿರುವುದು ಅಥವಾ ವಿಲೇವಾರಿಯಾಗದೆ ಉಳಿದಿರುವ ಕುರಿತು ಅಹವಾಲು ಸಲ್ಲಿಸಲಾಗಿದೆ ಎಂದು ತಿಳಿಸಿದರು.
18 ಕಿ.ಮೀ ವ್ಯಾಪ್ತಿಯ ನಿಯಮ ಜಾರಿಗೆ ಬರುವುದಕ್ಕೂ ಮುನ್ನ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರಿಗಣಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಈ ಸಂಬಂಧ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಹೇಳಿದರು.
ಬಗರ್ ಹುಕುಂ ಜಮೀನುಗಳಿಗೆ ಸಂಬಂಧಿಸಿದ ನಮೂನೆ 52 ಮತ್ತು 53ರ ಅರ್ಜಿಗಳು ಸೇರಿದಂತೆ ನಿಯಮ ಜಾರಿಯಾದ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಲಾಗುವುದು. ನ್ಯಾಯಾಲಯಗಳಿಂದ ಯಾವುದಾದರೂ ನಿರ್ದೇಶನಗಳು ಬಂದಿದ್ದರೆ ಅವುಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನಿನ ಅನ್ವಯ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅದೇ ರೀತಿ ಪೋಡಿ ಹಾಗೂ ದುರಸ್ತಿ ಕಾರ್ಯಗಳಲ್ಲಿ ವಿಳಂಬವಾಗುತ್ತಿರುವುದು ಗಮನಕ್ಕೆ ಬಂದಿದೆ. ಬಾಕಿ ಇರುವ ಪೋಡಿ ದುರಸ್ತಿ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ನ್ಯಾಯಾಲಯದ ಆದೇಶಗಳು ಮತ್ತು ನಿರ್ದೇಶನಗಳಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಬೇಕು. ಅಗತ್ಯವಿರುವ ಪ್ರಕರಣಗಳಲ್ಲಿ ಮೇಲ್ಮನವಿ ಸಲ್ಲಿಸುವ ಕುರಿತು ಸರ್ಕಾರದ ಗಮನಕ್ಕೆ ತಂದು ತೀರ್ಮಾನ ಕೈಗೊಳ್ಳಬಹುದು. ನ್ಯಾಯಾಲಯದ ಪ್ರಕರಣಗಳ ನೆಪದಲ್ಲಿ ಸಾರ್ವಜನಿಕರಿಗೆ ಅನಗತ್ಯ ತೊಂದರೆಯಾಗದಂತೆ ನೋಡಿಕೊಳ್ಳಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ವಿವರಿಸಿದರು.
ಪ್ರಜಾಸೇವೆ ಕಾರ್ಯಕ್ರಮದಡಿ 300ಕ್ಕೂ ಹೆಚ್ಚು ಅರ್ಜಿಗಳು; ಶೇ.60ರಿಂದ 70ರಷ್ಟು ವಿಲೇವಾರಿ:
ಸರ್ಕಾರ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಪ್ರಜಾಸೇವೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ. ಈ ಕಾರ್ಯಕ್ರಮದಡಿ ದೇವನಹಳ್ಳಿ ತಾಲೂಕಿನಲ್ಲಿ ಸ್ವೀಕರಿಸಿರುವ ಅರ್ಜಿಗಳು ಹಾಗೂ ಅವುಗಳ ವಿಲೇವಾರಿ ಸ್ಥಿತಿಯನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.
ಪ್ರಜಾಸೇವೆ ಕಾರ್ಯಕ್ರಮದಡಿ 300ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ ಸುಮಾರು ಶೇ.60 ರಿಂದ 70ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ವಿಲೇವಾರಿಗೆ ಸಾಧ್ಯವಾಗದ ಕೆಲವು ಪ್ರಕರಣಗಳು ಬಾಕಿ ಉಳಿದಿವೆ. ಈ ಕುರಿತು ಸಂಪೂರ್ಣ ದಾಖಲೆಗಳನ್ನು ಪಡೆದು ಪರಿಶೀಲಿಸಲಾಗಿದೆ ಎಂದು ಹೇಳಿದರು.
ಸಾರ್ವಜನಿಕರು ಪೋಡಿ ದುರಸ್ತಿ, ಬಗರ್ ಹುಕುಂ, ಖಾತೆ ಬದಲಾವಣೆ ಅಥವಾ ಕಂದಾಯ ಇಲಾಖೆಗೆ ಸಂಬಂಧಿಸಿದ ಯಾವುದೇ ಕೆಲಸಕ್ಕಾಗಿ ಕಚೇರಿಗೆ ಬಂದಾಗ ಅವರ ಅರ್ಜಿಗಳನ್ನು ಸಮರ್ಪಕವಾಗಿ ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಬೇಕು. ಪ್ರಭಾವಿಗಳು ಅಥವಾ ಆರ್ಥಿಕವಾಗಿ ಅನುಕೂಲಸ್ಥರ ಕೆಲಸಗಳನ್ನು ಆದ್ಯತೆಯ ಮೇರೆಗೆ ಮಾಡಿ, ಸಾಮಾನ್ಯ ಜನರ ಕೆಲಸಗಳನ್ನು ಅನಗತ್ಯವಾಗಿ ಅಲೆದಾಡಿಸುವ ಪ್ರವೃತ್ತಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂತಹ ತಾರತಮ್ಯ ಅಥವಾ ಕರ್ತವ್ಯಲೋಪ ಗಮನಕ್ಕೆ ಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರು ಕೂಡ ತಮ್ಮ ಕೆಲಸಗಳಿಗೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅನಗತ್ಯ ಅರ್ಜಿಗಳು, ಮತ್ತೊಬ್ಬರ ಜಮೀನಿಗೆ ಸಂಬಂಧಿಸಿದಂತೆ ಅಕ್ರಮವಾಗಿ ಖಾತೆ ಬದಲಾವಣೆ ಮಾಡಿಸುವ ಪ್ರಯತ್ನ ಹಾಗೂ ಸುಳ್ಳು ದಾಖಲೆಗಳ ಆಧಾರದಲ್ಲಿ ಅರ್ಜಿ ಸಲ್ಲಿಸುವಂತಹ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.