ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ

Chennamma Funeral With State Honours: ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ, ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

Jul 20, 2026 - 20:24
Jul 20, 2026 - 23:09
ಸಕಲ ಸರ್ಕಾರಿ ಗೌರವಗಳೊಂದಿಗೆ ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ

ಹಾಸನ: ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ, ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕುಟುಂಬಸ್ಥರು, ಬಂಧು - ಮಿತ್ರರು ಮತ್ತು ಭಾರೀ ಜನಸ್ತೋಮದ ನಡುವೆ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ಕಾರ್ಯಗಳು ಜರುಗಿದವು.

ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ವಿ.ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿ.ಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಡಾ.ಕೆ.ಸುಧಾಕರ್ ಹಾಗೂ ಶ್ರೇಯಸ್ ಪಟೇಲ್ ಸೇರಿದಂತೆ ಸಚಿವರು, ಶಾಸಕರು ಪಾಲ್ಗೊಂಡಿದ್ದರು. 

ಚೆನ್ನಮ್ಮ ಅವರ ಹಣೆಗೆ ಮುತ್ತಿಟ್ಟು ಪುತ್ರ ಹೆಚ್.ಡಿ.ಕುಮಾರಸ್ವಾಮಿ ಅಂತಿಮ ನಮನ ಸಲ್ಲಿಸಿದರು. 

ಅಂತ್ಯಕ್ರಿಯೆ ಹಿನ್ನೆಲೆ, ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಹೊಳೆನರಸೀಪುರ ತಾಲ್ಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು. ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಆದೇಶ ಹೊರಡಿಸಿದ್ದರು.

ಜುಲೈ 18 ಶನಿವಾರದಂದು ಚೆನ್ನಮ್ಮ ವಿಧಿವಶರಾಗಿದ್ದು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಜುಲೈ 15 ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದರು.