Time extended:ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ; ನಾಳೆ ಮುಂಜಾನೆ 4 ಗಂಟೆವರೆಗೆ ದರ್ಶನಕ್ಕೆ ಅವಕಾಶ ವಿಸ್ತರಣೆ

ಭಕ್ತರು ಇನ್ನು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಾಸನಾಂಬೆ ದೇವರ ದರ್ಶನದ ಅವಧಿಯನ್ನು ಇದೀಗ ಸ್ವಲ್ಪ ಮಟ್ಟಿಗೆ ವಿಸ್ತರಿಸಲಾಗಿದೆ. ಭಕ್ತರ ಮನವಿಗೆ ಸ್ಪಂದಿಸಿರುವ ಹಾಸನ ಜಿಲ್ಲಾಉಸ್ತುವಾರಿ ಸಚಿವ ಶಿವಲಿಂಗೇಗೌಡರು, ನಾಳೆ  ಅಂದರೆ ಬುಧವಾರ ಮುಂಜಾನೆ 4 ಗಂಟೆಯವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಶಿವಲಿಂಗೇಗೌಡರು ತಿಳಿಸಿದ್ದಾರೆ.

Nov 10, 2026 - 20:09
Nov 10, 2026 - 20:13
Time extended:ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ; ನಾಳೆ ಮುಂಜಾನೆ 4 ಗಂಟೆವರೆಗೆ ದರ್ಶನಕ್ಕೆ ಅವಕಾಶ ವಿಸ್ತರಣೆ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆ ದೇವಿಯ ದರ್ಶನಕ್ಕೆ ಭಕ್ತರ ಮಹಾಪೂರವೇ ಹರಿದು ಬರುತ್ತಿದೆ. ಕೇವಲ 12 ದಿನಗಳಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದು, ಭಕ್ತರು ಇನ್ನು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಇದೀಗ ಸ್ವಲ್ಪ ಮಟ್ಟಿಗೆ ವಿಸ್ತರಿಸಲಾಗಿದೆ. ಭಕ್ತರ ಮನವಿಗೆ ಸ್ಪಂದಿಸಿರುವ ಹಾಸನ ಜಿಲ್ಲಾಉಸ್ತುವಾರಿ ಸಚಿವ ಶಿವಲಿಂಗೇಗೌಡರು, ನಾಳೆ  ಅಂದರೆ ಬುಧವಾರ ಮುಂಜಾನೆ 4 ಗಂಟೆಯವರೆಗೂ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಭಕ್ತರ ಮನವಿ ಮೇರೆಗೆ ದರ್ಶನದ ಅವಧಿ ವಿಸ್ತರಣೆ

ಈ ಬಗ್ಗೆ ಮಾತನಾಡಿದ ಸಚಿವ ಶಿವಲಿಂಗೇಗೌಡರು, ಮಂಗಳವಾರ ರಾತ್ರಿ 8ರಿಂದ 10 ಗಂಟೆಯವರೆಗೆ ದೇವಿಗೆ ನೈವೇದ್ಯ ಸಲ್ಲಿಸುವ ಸಮಯವಿರಲಿದೆ. ಬಳಿಕ ಭಕ್ತರಿಗೆ ನಾಳೆ ಮುಂಜಾನೆ 4 ಗಂಟೆಯವರೆಗೂ ದರ್ಶನ ಪಡೆಯಲು ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.

ಹಾಸನ ನಗರದ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ದರ್ಶನದ ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದರು. ದೀಪಾವಳಿ ಹಬ್ಬದ ಸಂಭ್ರಮದ ಬಳಿಕವೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಿಯ ದರ್ಶನ ಪಡೆಯುವ ಆಸೆ ಹೊಂದಿದ್ದಾರೆ. ಹೀಗಿರುವಾಗ, ದರ್ಶನೋತ್ಸವ ಮುಕ್ತಾಯಗೊಂಡರೆ ಮತ್ತೆ ಒಂದು ವರ್ಷ ಕಾಯಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಚರ್ಚಿಸಿ ದರ್ಶನದ ಅವಧಿಯನ್ನು ಭಕ್ತರ ಅನುಕೂಲದಂತೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮುಂದಿನ ವರ್ಷ ಇನ್ನಷ್ಟು ಉತ್ತಮ ವ್ಯವಸ್ಥೆ: ಸಚಿವರ ಭರವಸೆ

2026ರ ಹಾಸನಾಂಬೆ ದರ್ಶನೋತ್ಸವ ಯಶಸ್ವಿಯಾಗಿ ನಡೆದಿದ್ದು, ಈ ಬಾರಿ ಸುಮಾರು 30 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಮುಂದಿನ ವರ್ಷ ದರ್ಶನೋತ್ಸವವನ್ನು ಇನ್ನಷ್ಟು ಉತ್ತಮವಾಗಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶಿವಲಿಂಗೇಗೌಡ ತಿಳಿಸಿದ್ದಾರೆ.

ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ ಸೀಮಿತವಾಗಿರುವುದರಿಂದ ಮುಂದಿನ ದಿನಗಳಲ್ಲಿ ಸ್ಥಳಾವಕಾಶ ವಿಸ್ತರಿಸುವ ಅಗತ್ಯವಿದೆ. ದಿನದ 24 ಗಂಟೆಯೂ ಭಕ್ತರಿಗೆ ದರ್ಶನ ಕಲ್ಪಿಸಲು ಅರ್ಚಕರು ಸಹಕಾರ ನೀಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

12 ದಿನಗಳಲ್ಲಿ ₹24.71 ಕೋಟಿ ಆದಾಯ ಸಂಗ್ರಹ

ಈ ವರ್ಷದ ಹಾಸನಾಂಬೆ ದರ್ಶನೋತ್ಸವ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಅಕ್ಟೋಬರ್ 29ರಂದು ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಾಗಿದ್ದು, ಕೇವಲ 12 ದಿನಗಳಲ್ಲಿ 30 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಐದು ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದಾರೆ.

ಟಿಕೆಟ್ ಮಾರಾಟ ಹಾಗೂ ಲಡ್ಡು ಪ್ರಸಾದ ಮಾರಾಟದಿಂದ ಒಟ್ಟು ₹24.71 ಕೋಟಿ ಆದಾಯ ಸಂಗ್ರಹವಾಗಿದೆ. ಭಕ್ತರ ಭಾರೀ ಸಂಖ್ಯೆಯ ಆಗಮನದೊಂದಿಗೆ 2026ರ ಹಾಸನಾಂಬೆ ದರ್ಶನೋತ್ಸವ ಗಮನಾರ್ಹ ಯಶಸ್ಸು ಕಂಡಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.