ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಎಸ್.ಸುಧೀಂದ್ರ ಕುಮಾರ್ ಸ್ಫರ್ಧೆ
Bengaluru: ಕನ್ನಡ ಸಾಹಿತ್ಯ ಪರಿಷತ್ತಿನ 2027ರ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಹೆಚ್.ಎಸ್.ಸುಧೀಂದ್ರ ಕುಮಾರ್ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ 2027ರ ಚುನಾವಣೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ ಮತ್ತು ಯಶವಂತಪುರ ವಿಧಾನಸಭಾ ಕ್ಷೇತ್ರ ಕಸಾಪ ಅಧ್ಯಕ್ಷ ಹೆಚ್.ಎಸ್.ಸುಧೀಂದ್ರ ಕುಮಾರ್ ಅವರು ಸ್ಪರ್ಧಿಸಲು ತೀರ್ಮಾನಿಸಿದ್ದಾರೆ.
ಯಶವಂತಪುರ ಕಸಾಪ ಅಧ್ಯಕ್ಷರಾಗಿ ಎರಡು ಅವಧಿ ಸೇವೆ ಸಲ್ಲಿಸಿರುವ ಅವರು, ಮೂರು ಕನ್ನಡ ಸಾಹಿತ್ಯ ಸಮ್ಮೇಳನಗಳು, ಕನ್ನಡ ರಾಜ್ಯೋತ್ಸವ, ಕನ್ನಡ ನಾಟಕೋತ್ಸವ, ಪ್ರತಿಭಾ ಪುರಸ್ಕಾರ, ಕವಿ ಸಮ್ಮೇಳನ, ಪುಸ್ತಕ ಬಿಡುಗಡೆ ಸೇರಿದಂತೆ ಹಲವು ಕನ್ನಡಪರ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.
ಕಳೆದ ಮೂರೂವರೆ ದಶಕಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಸುಧೀಂದ್ರ ಕುಮಾರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಮತ್ತು ಕರ್ನಾಟಕ ರಾಜ್ಯ ಜಿಲ್ಲಾ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅವರ ಕನ್ನಡ ಮತ್ತು ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ ಹಲವು ಪ್ರಶಸ್ತಿಗಳು ಲಭಿಸಿವೆ.
'ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕನ್ನಡದ ಕೆಲಸ ಮಾಡಿರುವ ನನಗೆ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಅವಕಾಶ ನೀಡಬೇಕು. ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಕೆಲಸವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ನಿಮ್ಮ ಸಹಕಾರ ಮತ್ತು ಆಶೀರ್ವಾದ ಬೇಕು' ಎಂದು ಮನವಿ ಮಾಡಿದ್ದಾರೆ.