ಪರವಾನಿಗೆ ದಿನಾಂಕ ತಿದ್ದಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು. ಆರೋಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

May 16, 2026 - 20:04
ಪರವಾನಿಗೆ ದಿನಾಂಕ ತಿದ್ದಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ

ವಿಟ್ಲ, ಮೇ 16: ಪರವಾನಿಗೆ ಅವಧಿ ಮುಗಿದಿದ್ದರೂ ದಿನಾಂಕವನ್ನು ತಿದ್ದಿ, ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ಮೇರಮಜಲು ನಿವಾಸಿ ರಂಜೀತ್ ಕುಮಾರ್ ಎಂಬಾತನೇ ಪ್ರಕರಣದ ಆರೋಪಿತನಾಗಿದ್ದಾನೆ.

ಘಟನೆಯ ವಿವರ: ಮೇ 14ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಅಳಿಕೆ ಗ್ರಾಮದ ಕೋಟೆ ಎಂಬಲ್ಲಿ ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ತಕ್ಷಣವೇ ಕಾರ್ಯಪ್ರವೃತ್ತರಾದ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಪೋರ್ಜರಿ ಪತ್ತೆಯಾಗಿದ್ದು ಹೇಗೆ?
ಗಣಿಗಾರಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಪೊಲೀಸರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಕೂಲಂಕಷವಾಗಿ ಪರಿಶೀಲನೆಗೆ ಒಳಪಡಿಸಿದ್ದಾರೆ. ಈ ವೇಳೆ ಸದ್ರಿ ಕೆಂಪುಕಲ್ಲು ಗಣಿಗಾರಿಕೆಯ ಪರವಾನಿಗೆಯು 29.04.2026 ರಂದೇ ಮುಕ್ತಾಯಗೊಂಡಿರುವುದು ಧೃಢಪಟ್ಟಿದೆ. ಆದರೆ, ಆರೋಪಿಯು ಕಾನೂನು ಬಾಹಿರವಾಗಿ ಗಣಿಗಾರಿಕೆ ಮುಂದುವರಿಸುವ ಉದ್ದೇಶದಿಂದ ಪರವಾನಿಗೆ ಪತ್ರದಲ್ಲಿದ್ದ ದಿನಾಂಕವನ್ನು 29.05.2026 ಎಂಬುದಾಗಿ ತಿದ್ದಿ (ಪೋರ್ಜರಿ ಮಾಡಿ) ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 110/2026 ರಂತೆ ಮೊಕದ್ದಮೆ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.