ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಸಮಗ್ರ ಉತ್ತೇಜನ: ಸಚಿವ ಕೆ.ಜೆ. ಜಾರ್ಜ್
Karnataka: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಮಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ. ನದಿ ಪ್ರವಾಸೋದ್ಯಮ, ಕ್ರೂಸ್, ಹೌಸ್‌ಬೋಟ್, ಬೀಚ್ ಪ್ರವಾಸೋದ್ಯಮ, ವಾಟರ್ ಸ್ಪೋರ್ಟ್ಸ್ ಮತ್ತು ಸ್ಥಳೀಯ ಸಮುದಾಯ ಆಧಾರಿತ ಪ್ರವಾಸೋದ್ಯಮವನ್ನು ಪರಸ್ಪರ ಜೋಡಿಸುವ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಇಂಧನ & ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ (K.J.George) ಹೇಳಿದರು.
ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್, ಕರಾವಳಿ ಪ್ರದೇಶಗಳು ಮತ್ತು ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನೇತ್ರಾವತಿಯಲ್ಲಿ ರಿವರ್ ಕ್ರೂಸ್, ಹೌಸ್‌ಬೋಟ್:
ನೇತ್ರಾವತಿ ನದಿಯಲ್ಲಿ ರಿವರ್ ಕ್ರೂಸ್ ಹಾಗೂ ಹೌಸ್‌ಬೋಟ್ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಗಳಲ್ಲಿ ಸ್ಥಳೀಯ ಮೀನುಗಾರರು ಮತ್ತು ಕರಾವಳಿ ಸಮುದಾಯದ ಜನರನ್ನು ಸಕ್ರಿಯವಾಗಿ ತೊಡಗಿಸಿಕೊಂಡು, ಅವರಿಗೆ ಹೊಸ ಉದ್ಯೋಗ ಹಾಗೂ ಆದಾಯದ ಅವಕಾಶಗಳನ್ನು ಸೃಷ್ಟಿಸಲು ಉದ್ದೇಶಿಸಲಾಗಿದೆ ಎಂದರು.
ಕ್ರೂಸ್ ಹಡಗುಗಳಲ್ಲಿ ಮಂಗಳೂರಿಗೆ ಬರುವ ಪ್ರವಾಸಿಗರು ಕರಾವಳಿಯ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅನುಕೂಲವಾಗುವಂತೆ ಕ್ರೂಸ್ ಸಂಪರ್ಕಿತ ಪ್ರವಾಸಿ ವಲಯಗಳು ಮತ್ತು ಅಗತ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಂಗಳೂರು–ಗೋವಾ ಕ್ರೂಸ್ ಪ್ರವಾಸೋದ್ಯಮ:
ನ್ಯೂ ಮಂಗಳೂರು ಬಂದರಿನ ಸಾಮರ್ಥ್ಯವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಹೆಚ್ಚಿನ ದೇಶೀಯ ಮತ್ತು ಅಂತರರಾಷ್ಟ್ರೀಯ ಕ್ರೂಸ್ ಹಡಗುಗಳನ್ನು ಆಕರ್ಷಿಸುವ ಕುರಿತು ಚರ್ಚಿಸಲಾಗಿದೆ ಎಂದು ಹೇಳಿದರು.
ಮಂಗಳೂರು–ಕಾರವಾರ–ಗೋವಾ ವಲಯದಲ್ಲಿ ದೇಶೀಯ ಕ್ರೂಸ್ ಸೇವೆಗಳನ್ನು ಉತ್ತೇಜಿಸಲು ಖಾಸಗಿ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದರು.
ವಾಟರ್ ಸ್ಪೋರ್ಟ್ಸ್‌ಗೆ ಮೊದಲು ಮೂಲಸೌಕರ್ಯ:
ವಾಟರ್ ಸ್ಪೋರ್ಟ್ಸ್, ಸಾಹಸ ಪ್ರವಾಸೋದ್ಯಮ ಮತ್ತು ಕರಾವಳಿ ಉತ್ಸವಗಳನ್ನು ದೊಡ್ಡ-ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಮುನ್ನ, ರಸ್ತೆ ಸಂಪರ್ಕ, ಪ್ರವೇಶ ಮಾರ್ಗ, ಸುರಕ್ಷತೆ ಹಾಗೂ ಪ್ರವಾಸಿಗರಿಗೆ ಅಗತ್ಯವಿರುವ ಮೂಲಸೌಕರ್ಯವನ್ನು ಬಲಪಡಿಸಬೇಕಾಗಿದೆ ಎಂದು ತಿಳಿಸಿದರು.
ಹೋಂಸ್ಟೇ ಹೆಸರಿನಲ್ಲಿ ವಾಣಿಜ್ಯ ಲಾಡ್ಜ್‌ಗಳಿಗೆ ಅವಕಾಶವಿಲ್ಲ:
ಪ್ರವಾಸಿಗರಿಗೆ ಸ್ಥಳೀಯ ಜೀವನಶೈಲಿ ಮತ್ತು ಸಂಸ್ಕೃತಿಯ ಅನುಭವ ನೀಡುವ ನೈಜ ಹೋಂಸ್ಟೇ ವ್ಯವಸ್ಥೆಯನ್ನು ಪ್ರೋತ್ಸಾಹಿಸಲಾಗುವುದು. ಆದರೆ ಹೋಂಸ್ಟೇ ಹೆಸರಿನಲ್ಲಿ ದೊಡ್ಡ ಪ್ರಮಾಣದ ವಾಣಿಜ್ಯ ಲಾಡ್ಜ್ ಅಥವಾ ಹೋಟೆಲ್ ಚಟುವಟಿಕೆ ನಡೆಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ. ಹೋಂಸ್ಟೇ ಮತ್ತು ವಾಣಿಜ್ಯ ವಸತಿ ವ್ಯವಸ್ಥೆಗಳ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ಜಾರಿಗೊಳಿಸಿ, ನಿಗದಿತ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದರು.
ಕ್ಯಾಸಿನೋ ಪ್ರವಾಸೋದ್ಯಮಕ್ಕೆ ಅವಕಾಶವಿಲ್ಲ:
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಯ ಹೆಸರಿನಲ್ಲಿ ಕ್ಯಾಸಿನೋ ಸಂಸ್ಕೃತಿಯನ್ನು ಉತ್ತೇಜಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.