Rain Alert: ರಾಜ್ಯದಲ್ಲಿ ವಿವಿಧೆಡೆ ಭಾರೀ ಮಳೆ ಸಾಧ್ಯತೆ

Rain Alert: ಕರ್ನಾಟಕದ ವಿವಿಧ ಭಾಗಗಳಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Aug 7, 2026 - 11:50
Aug 7, 2026 - 11:55
Rain Alert: ರಾಜ್ಯದಲ್ಲಿ ವಿವಿಧೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ವಿವಿಧ ಭಾಗಗಳಲ್ಲಿ 4 ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ - ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. 

ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. 

ಬೆಳಗಾವಿ, ಧಾರವಾಡ, ಕಲಬುರಗಿ, ರಾಯಚೂರು ಹಾಗೂ ವಿಜಯಪುರದಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಲಿದೆ. 

ಬೆಂಗಳೂರಿನಲ್ಲಿಂದು ಗರಿಷ್ಠ 29 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಲಘು ಮಳೆಯಾಗುವ ನಿರೀಕ್ಷೆಯಿದೆ. 

ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆ:

ಕೇರಳ, ಪಶ್ಚಿಮ ಮಧ್ಯಪ್ರದೇಶ ಹಾಗೂ ಪೂರ್ವ ರಾಜಸ್ಥಾನದಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಲಯ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪೂರ್ವ & ಈಶಾನ್ಯ ಭಾರತದ ವಿವಿಧೆಡೆಯೂ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದೆ.
 
ಧಾರಾಕಾರ ಮಳೆಯಾಗುವ ಹಿನ್ನೆಲೆ ಕೇರಳ ರಾಜ್ಯದ ಪಟ್ಟಣಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. 

ಗುರುವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದವು.