ರಾಜ್ಯದ ಹಿತದೃಷ್ಟಿಯಿಂದ ಸಂಪುಟ ವಿಸ್ತರಣೆ ನಡೆದಿಲ್ಲ: ಬಿ.ವೈ.ವಿಜಯೇಂದ್ರ
B.Y.Vijayendra: ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನದಲ್ಲಿ' ಇಂದು ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೆಂಗಳೂರು: ರಾಜ್ಯದ ಹಿತದೃಷ್ಟಿಯಿಂದ ಈ ಸಚಿವ ಸಂಪುಟ ವಿಸ್ತರಣೆ ನಡೆದಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ & ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಅಧಿಕಾರದ ಪೈಪೋಟಿ ಹಾಗೂ ಹೈಕಮಾಂಡ್‍ನ ರಾಜಕೀಯ ಸಮೀಕರಣಗಳೇ ಕ್ಯಾಬಿನೆಟ್ ವಿಸ್ತರಣೆಯ ಹಿಂದಿನ ಪ್ರಮುಖ ಕಾರಣಗಳಾಗಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ 'ಜಗನ್ನಾಥ ಭವನದಲ್ಲಿ' ಇಂದು (ಬುಧವಾರ) ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಸಿಎಂ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ, ಎರಡು ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ರೇಟ್ ಫಿಕ್ಸ್ ಆಗದೇ.. ಡೇಟ್ ಫಿಕ್ಸ್ ಆಗುತ್ತಿಲ್ಲ ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಒಂದು ಪೇಮೆಂಟ್ ಕೋಟದಲ್ಲಿ ಅಥವಾ ಮ್ಯಾನೇಜ್‍ಮೆಂಟ್ ಕೋಟದಡಿ ಕ್ಯಾಬಿನೆಟ್‌ಗೆ ಸೇರಬೇಕಿತ್ತು. ಎರಡು ಬಿಟ್ಟರೆ, ಮೂರನೇ ಕೋಟಾ ಇರಲಿಲ್ಲ. ಕೆಲವರು ಪೇಮೆಂಟ್ ಕೋಟದಲ್ಲಿ ಹಾಗೂ ಇನ್ನೂ ಕೆಲವರು ಮ್ಯಾನೇಜ್‍ಮೆಂಟ್ ಕೋಟದಡಿ ಸಚಿವ ಸಂಪುಟಕ್ಕೆ ಸೇರಿದ್ದಾರೆ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಚಾರ್ಜ್‍ಶೀಟ್ ಸಲ್ಲಿಕೆಯಾಗಿ, ವಿಚಾರಣೆ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿರುವುದು ಏಕೆ? ಭ್ರಷ್ಟಾಚಾರ ರಹಿತ ಆಡಳಿತದ ಬಗ್ಗೆ ಮಾತನಾಡುವ ಕಾಂಗ್ರೆಸ್ ತನ್ನದೇ ನೈತಿಕತೆಯನ್ನು ಉಲ್ಲಂಘಿಸಿದೆ ಎಂದು ಹೇಳಿದರು.
ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸರ್ಕಾರ, ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಅವಕಾಶ ನೀಡಿಲ್ಲ. ಕೊನೆಯ ಕ್ಷಣದಲ್ಲಿ ಗಾಯತ್ರಿ ಶಾಂತೇಗೌಡ ಅವರ ಹೆಸರನ್ನು ಕೈಬಿಟ್ಟಿತು. ಈ ಮೂಲಕ ಮಹಿಳೆಯರ ಕುರಿತು ತನ್ನ ನಿಜವಾದ ಮನೋಭಾವವನ್ನು ಕಾಂಗ್ರೆಸ್ ಪ್ರದರ್ಶಿಸಿದೆ ಎಂದು ಟೀಕಿಸಿದರು.
ಸಚಿವರ ಆಯ್ಕೆ ಮಾತ್ರವಲ್ಲ, ಯಾರಿಗೆ ಯಾವ ಖಾತೆ ನೀಡಬೇಕು ಎಂಬುದನ್ನು ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಖ್ಯಮಂತ್ರಿಗಳು ಮತ್ತೆ ಮತ್ತೆ ದೆಹಲಿಗೆ ತೆರಳಿ ಅನುಮೋದನೆ ಪಡೆಯಬೇಕಾದ ಪರಿಸ್ಥಿತಿ, ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅಪರೂಪವಾಗಿದೆ ಎಂದು ಹೇಳಿದರು.
ಪಿಡಿಒ, ಕೃಷಿ ಇಲಾಖೆಯ ಎಒ & ಎಎಒ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ನ್ಯಾಯಕ್ಕಾಗಿ ಹೋರಾಡುತ್ತಿರುವ ಯುವಕರ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಲಘುವಾಗಿ ಮಾತನಾಡಿರುವುದು ಖಂಡನೀಯ. ಸಮಸ್ಯೆ ಬಗೆಹರಿಸುವ ಬದಲು ಪ್ರತಿಭಟನಾಕಾರರನ್ನು ಅಪಹಾಸ್ಯ ಮಾಡುವುದು ಸರ್ಕಾರದ ಅಹಂಕಾರವನ್ನು ತೋರಿಸುತ್ತದೆ ಎಂದು ತಿಳಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.