ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟಗಳ ಬಗ್ಗೆ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನ.. ಸಿಎಂ
Kasturirangan Report: ಡಾ.ಕೆ.ಕಸ್ತೂರಿರಂಗನ್ ವರದಿ ಆಧರಿಸಿ, ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಕರಡು ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರು: ಡಾ.ಕೆ.ಕಸ್ತೂರಿರಂಗನ್ ವರದಿ ಆಧರಿಸಿ, ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರವು 7ನೇ ಕರಡು ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಚರ್ಚಿಸಲು ಒಂದು ದಿನದ ವಿಶೇಷ ಅಧಿವೇಶನವನ್ನು ಕರೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK.Shivakumar) ತಿಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
'ಈಗ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ಪ್ರಸ್ತುತ ರೂಪದಲ್ಲಿ ಅಂತಿಮಗೊಳಿಸಬಾರದು. ಆರು ರಾಜ್ಯಗಳ 56,000 ಚದರ ಕಿಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲು ಕೇಂದ್ರ ಪ್ರಸ್ತಾಪಿಸಿದೆ. ಕರ್ನಾಟಕದ 20,668 ಚದರ ಕಿಮೀ ಪ್ರದೇಶ, 10 ಜಿಲ್ಲೆಗಳ (ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ & ಉಡುಪಿ) 33 ತಾಲೂಕುಗಳು ಹಾಗೂ 1,449 ಗ್ರಾಮಗಳು ಈ ವ್ಯಾಪ್ತಿಗೆ ಸೇರುತ್ತವೆ. ಕೃಷಿಕರ ಜೀವನೋಪಾಯ ಮತ್ತು ಭವಿಷ್ಯದ ಅಭಿವೃದ್ಧಿಗೆ ತೊಂದರೆಯಾಗಲಿದೆ' ಎಂದು ಹೇಳಿದರು.
'ಕಸ್ತೂರಿರಂಗನ್ ಸಮಿತಿಯ ಶಿಫಾರಸುಗಳನ್ನು ತಿರಸ್ಕರಿಸಿ, ಜುಲೈ 31, 2024ರ ಕರಡು ಅಧಿಸೂಚನೆಯನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ಅಂದಿನ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ಒಮ್ಮತದ ನಿರ್ಧಾರ ಕೈಗೊಂಡಿತ್ತು. ಆದಾಗ್ಯೂ ಕೇಂದ್ರವು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದು, ರಾಜ್ಯ ಸರ್ಕಾರ ಇದನ್ನು ಒಪ್ಪುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
'ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ, ಜನರ ಅಭಿಪ್ರಾಯನ್ನು ಪಡೆಯಲಾಗುವುದು. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ವತಿಯಿಂದ ಜನಜಾಗೃತಿ ಮೂಡಿಸಲಾಗುವುದು. ರಾಜ್ಯದ ನಿಲುವನ್ನು ಕೇಂದ್ರ ಸರ್ಕಾರ ಗೌರವಿಸಬೇಕು. ಈ ವಿಚಾರವಾಗಿ ಕಾನೂನು ಚೌಕಟ್ಟಿನಲ್ಲಿ ಚರ್ಚಿಸಲಾಗುವುದು. ಕರ್ನಾಟಕಕ್ಕೆ ಒಂದು ನಿಯಮ ಹಾಗೂ ಬೇರೆಡೆ ಇನ್ನೊಂದು ನಿಯಮವನ್ನು ಕೇಂದ್ರ ಕೈಗೊಂಡಿದೆ' ಎಂದರು.