ಜೂನ್ 1 ರಿಂದ 'ಕರ್ನಾಟಕ ಪಬ್ಲಿಕ್ ಸ್ಕೂಲ್' ಯೋಜನೆಗೆ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಗೃಹ ಕಚೇರಿ 'ಕೃಷ್ಣಾ'ದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದ ಈ ಸಭೆಯಲ್ಲಿ, ರಾಜ್ಯದ ಶಿಕ್ಷಣ ವ್ಯವಸ್ಥೆಯ ಬಲವರ್ಧನೆ ಮತ್ತು ಇತ್ತೀಚಿನ ಪರೀಕ್ಷಾ ಫಲಿತಾಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

May 20, 2026 - 21:24
ಜೂನ್ 1 ರಿಂದ 'ಕರ್ನಾಟಕ ಪಬ್ಲಿಕ್ ಸ್ಕೂಲ್' ಯೋಜನೆಗೆ ಚಾಲನೆ

ಬೆಂಗಳೂರು, ಮೇ 20: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಮಹತ್ವಾಕಾಂಕ್ಷಿ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ (KPS) ಯೋಜನೆಗೆ ಜೂನ್ 1 ರಂದು ಶಿವಮೊಗ್ಗದಲ್ಲಿ ಅಧಿಕೃತ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಿಸಿದರು.

ಬುಧವಾರ ಇಲ್ಲಿ ಸಭೆ ನಡೆಸಿದ ಅವರು, ಸಂಪೂರ್ಣ ಶಿಕ್ಷಣ ಒಂದೇ ಸೂರಿನಡಿ: ಈ ಮಾದರಿ ಶಾಲೆಗಳಲ್ಲಿ ಎಲ್‌.ಕೆ.ಜಿಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದ್ದು, ಪ್ರತಿ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದೆ ಎಂದರು.

800 ಶಾಲೆಗಳ ಗುರಿ: ಈ ವರ್ಷ ಹೊಸದಾಗಿ 800 ಕೆಪಿಎಸ್ ಶಾಲೆಗಳನ್ನು ಆರಂಭಿಸಲು ತಕ್ಷಣವೇ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಸಿಎಂ ಸೂಚಿಸಿದರು. ಮುಂದಿನ ಎರಡು ವರ್ಷಗಳಲ್ಲಿ ಈ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಜ್ಜಾಗಬೇಕಿದೆ.

ಬಸ್ ಸೌಲಭ್ಯ: ದೂರದ ಊರುಗಳಿಂದ ಬರುವ ಕೆಪಿಎಸ್ ಶಾಲಾ ಮಕ್ಕಳಿಗೆ ಅನುಕೂಲವಾಗುವಂತೆ ಶಾಲಾ ಬಸ್ ವ್ಯವಸ್ಥೆಯನ್ನು ಕಲ್ಪಿಸುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
15 ಸಾವಿರ ಶಿಕ್ಷಕರ ಭರ್ತಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲು 15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತ ಪ್ರಸ್ತಾವನೆಯನ್ನು ತಕ್ಷಣವೇ ಆರ್ಥಿಕ ಇಲಾಖೆಗೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದರೊಂದಿಗೆ ಶಾಲಾ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕಗಳ ಜೊತೆಗೆ ಉಚಿತ ನೋಟ್ ಬುಕ್ ವಿತರಿಸುವ ಬೇಡಿಕೆಯನ್ನೂ ಪರಿಶೀಲಿಸುವುದಾಗಿ ತಿಳಿಸಿದರು.

ದಾಖಲೆ ಬರೆದ SSLC ಮತ್ತು ಪಿಯುಸಿ ಫಲಿತಾಂಶ
ಪ್ರಸಕ್ತ ಸಾಲಿನಲ್ಲಿ ರಾಜ್ಯದ SSLC ಮತ್ತು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅಭೂತಪೂರ್ವ ಸುಧಾರಣೆ ಕಂಡುಬಂದಿದೆ. ಈ ಬಾರಿ ಯಾವುದೇ ವಿದ್ಯಾರ್ಥಿಗೂ ಗ್ರೇಸ್ ಅಂಕಗಳನ್ನು ನೀಡಿಲ್ಲ ಹಾಗೂ ಇನ್ಮುಂದೆ SSLC ಮೂರನೇ ಅಂತಿಮ ಪರೀಕ್ಷೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಯಿತು.

‌ಯಶಸ್ಸಿನ ಹಿಂದಿನ ರಹಸ್ಯ ಬಿಚ್ಚಿಟ್ಟ ಶಿಕ್ಷಣ ಸಚಿವರು

ಈ ಅಭೂತಪೂರ್ವ ಫಲಿತಾಂಶದ ಹಿಂದಿನ ಶ್ರಮದ ಕುರಿತು ಸಭೆಗೆ ಮಾಹಿತಿ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, "ಮುಖ್ಯಮಂತ್ರಿಗಳ ಸ್ಪಷ್ಟ ನಿರ್ದೇಶನದಂತೆ ರಾಜ್ಯಾದ್ಯಂತ ಪೋಷಕರು ಮತ್ತು ಶಿಕ್ಷಕರ ನಿರಂತರ ಸಭೆಗಳನ್ನು ನಡೆಸಲಾಗಿತ್ತು. ಕೊರತೆ ಇದ್ದ ಕಡೆ ಅತಿಥಿ ಶಿಕ್ಷಕರನ್ನು ನೇಮಿಸಿ, ಪಠ್ಯ ಆಧಾರಿತ ವಿಶೇಷ ಅಧ್ಯಯನ ಕ್ರಮಗಳನ್ನು ರೂಪಿಸಲಾಗಿತ್ತು. ರಾಜ್ಯಮಟ್ಟದಲ್ಲಿ ಪೂರ್ವಭಾವಿ ಪರೀಕ್ಷೆಗಳು ಹಾಗೂ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡಿದ್ದರಿಂದ ಈ ಐತಿಹಾಸಿಕ ಫಲಿತಾಂಶ ಸಾಧ್ಯವಾಗಿದೆ" ಎಂದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.