ದಕ್ಷಿಣ ಕನ್ನಡ: ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ, ಕರಾವಳಿ ಭಾಗದ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ನ.30 ರಂದು ಮಂಗಳೂರು ನಗರದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ ಸುಮಾರು 200ಕ್ಕೂ ಹೆಚ್ಚಿನ ಉದ್ಯೋಗದಾತರು ಹಾಗೂ 10,000ಕ್ಕೂ ಹೆಚ್ಚಿನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಲ್ಪಟ್ಟ 10,089 ಅಭ್ಯರ್ಥಿಗಳು, ಜಿಲ್ಲೆಯ ಯುವನಿಧಿ ಯೋಜನೆಯಡಿ ನೋಂದಾಯಿಸಿದ 8708 ಫಲಾನುಭವಿಗಳು, ಯುವ ಉದ್ಯೋಗ ಸೇತು ಪೋರ್ಟಲ್‌ನಲ್ಲಿ ಉದ್ಯೋಗಕ್ಕಾಗಿ ನೋಂದಾಯಿಸಲ್ಪಟ್ಟ ಉದ್ಯೋಗಾಕಾಂಕ್ಷಿಗಳು ಹಾಗೂ ಜಿಲ್ಲೆಯ ಇತರೆ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಪಡೆಯಲು ಅತ್ಯುತ್ತಮ ಅವಕಾಶವಾಗಿದೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 17 ಎಂಜಿನಿಯರಿಂಗ್ ಕಾಲೇಜುಗಳು, 11 ಪಾಲಿಟೆಕ್ನಿಕ್ ಕಾಲೇಜುಗಳು, 25 ಸರ್ಕಾರಿ/ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳು, 115 ಪದವಿ ಕಾಲೇಜುಗಳು, 210 ಪದವಿ ಪೂರ್ವ ಕಾಲೇಜುಗಳು ಹಾಗೂ 611 ಪ್ರೌಢಶಾಲೆಗಳಿಂದ 65,000 ಹೆಚ್ಚಿನ ವಿದ್ಯಾರ್ಥಿಗಳು ಪ್ರತಿ ವರ್ಷ ಉತ್ತೀರ್ಣರಾಗಿ ಹೊರಬರುತ್ತಿದ್ದು, ಇವರುಗಳಿಗೆ ಉದ್ಯೋಗ ಪಡೆಯಲು ನೆರವಾಗಲಿದೆ ಎಂದು ಹೇಳಿದ್ದಾರೆ.
ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಿಂದಲೂ ಉದ್ಯೋಗಾಕಾಂಕ್ಷಿಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಊಟೋಪಚಾರದ ವ್ಯವಸ್ಥೆ: ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೆ ಊಟೋಪಚಾರದ ವ್ಯವಸ್ಥೆ ಇರಲಿದೆ.
ಈ ಬೃಹತ್ ಉದ್ಯೋಗ ಮೇಳವನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಆರ್ ಪಾಟೀಲ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷ ಶಿವಕಾಂತಮ್ಮ (ಕಾಂತ) ನಾಯಕ್, ಸ್ಥಳೀಯ ಲೋಕಸಭಾ ಸದಸ್ಯರುಗಳು, ಜಿಲ್ಲೆಯ ವಿಧಾನಸಭೆ, ವಿಧಾನ ಪರಿಷತ್ ಸದಸ್ಯರುಗಳು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರುಗಳು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಜರಿರಲಿದ್ದಾರೆ.