BJP ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ ಮೊಹಮ್ಮದ್ ಶಮಿ: ಪಕ್ಷ ಸೇರುವರೇ?
Mohammed Shami: ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಶಮಿ ಭೇಟಿಯಾದರು.
ನವದೆಹಲಿ: ಖ್ಯಾತ ಕ್ರಿಕೆಟಿಗ ಮೊಹಮ್ಮದ್ ಶಮಿ (Mohammed Shami) ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳು ಎಲ್ಲೆಡೆ ಹರಿದಾಡುತ್ತಿವೆ.
ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಶಮಿ ಭೇಟಿಯಾದರು. ಈ ವೇಳೆ ಪಕ್ಷದ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಕುನ್ವರ್ ಬಸಿತ್ ಅಲಿ ಕೂಡ ಉಪಸ್ಥಿತರಿದ್ದರು.
ಸದ್ಯ ಭೇಟಿ ಹಿಂದಿನ ನಿಖರ ಕಾರಣ ಬಹಿರಂಗಗೊಂಡಿಲ್ಲ. ಶಮಿಗೆ ಬಿಜೆಪಿ ಅಲ್ಪಸಂಖ್ಯಾತ ವಿಭಾಗದಲ್ಲಿ ಪ್ರಮುಖ ಜವಾಬ್ದಾರಿ ನೀಡಬಹುದು ಎನ್ನಲಾಗಿದೆ. ಅವರು, ಉತ್ತರ ಪ್ರದೇಶದ ಅಮ್ರೋಹಾದಿಂದ ಚುನಾವಣೆಗೆಗೂ ಸ್ಪರ್ಧಿಸಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
ನ.6 ರಂದು ಟೆಸ್ಟ್ ಕ್ರಿಕೆಟ್‌ನಿಂದ ಶಮಿ ನಿವೃತ್ತಿಯಾಗಿದ್ದರು. ಇದರೊಂದಿಗೆ 13 ವರ್ಷಗಳ ಸುದೀರ್ಘ ಟೆಸ್ಟ್ ವೃತ್ತಿಜೀವನಕ್ಕೆ ಗುಡ್‌ಬೈ ಹೇಳಿದ್ದರು. ಭಾರತ ಪರ 64 ಟೆಸ್ಟ್ ಪಂದ್ಯಗಳನ್ನು ಆಡಿರುವ ಅವರು, 122 ಇನ್ನಿಂಗ್ಸ್‌ಗಳಲ್ಲಿ 27.71 ಸರಾಸರಿಯಲ್ಲಿ 229 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಕೊನೆಯ ಟೆಸ್ಟ್ ಪಂದ್ಯವನ್ನು 2021-23ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ್ದರು.
ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದಾಗ, ಟಿ20 ಮತ್ತು ಏಕದಿನ ಪಂದ್ಯಗಳನ್ನು ಆಡುವುದಾಗಿ ಹೇಳಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ಮತ್ತು ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ.
ಕ್ರಿಕೆಟಿಗ ಯುಜ್ವೇಂದ್ರ ಚಾಹಲ್ ಬಿಜೆಪಿಗೆ ಸೇರ್ಪಡೆಗೊಂಡ 1 ವಾರದ ಬಳಿಕ ಶಮಿ, ನಿತಿನ್ ನವೀನ್ ಅವರನ್ನು ಭೇಟಿಯಾಗಿದ್ದಾರೆ. ಚಾಹಲ್‌ರನ್ನು ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಗೆ ವಿಶೇಷ ಆಹ್ವಾನಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.