ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ.

Jun 11, 2026 - 22:19
ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

ಬೆಂಗಳೂರು, ಜೂನ್ 11: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (ಪಲ್ಸ್ ಪೋಲಿಯೋ)' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ವೈಲ್ಡ್ ಪೋಲಿಯೋ ವೈರಸ್ (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ:

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.