ಮಡಿಯಾಲದಲ್ಲಿ ಕೃತಕ ಬುದ್ಧಿಮತ್ತೆ ಸಂಶೋಧನಾ ಕೇಂದ್ರಕ್ಕೆ ನ.30ಕ್ಕೆ ಭೂಮಿಪೂಜೆ: ಸದ್ಗುರು ಶ್ರೀ ಮಧುಸೂದನ ಸಾಯಿ
Madiyala AI Research Center: ಮಡಿಯಾಲದಲ್ಲಿ ಕೃತಕ ಬುದ್ಧಿಮತ್ತೆ ಸಂಶೋಧನಾ ಕೇಂದ್ರಕ್ಕೆ ನ.30ಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು.
ಚಿಕ್ಕಬಳ್ಳಾಪುರ: ಮೌಲ್ಯಾಧಾರಿತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದ ಮಡಿಯಾಲ ನಾರಾಯಣ ಭಟ್ ಅವರ ಜನ್ಮ ಶತಾಬ್ದಿ ಸ್ಮರಣಾರ್ಥ, ಅವರ ಹುಟ್ಟೂರಾದ ಮಡಿಯಾಲದಲ್ಲಿ ಕೃತಕ ಬುದ್ಧಿಮತ್ತೆ (AI) ಮತ್ತು ಯಂತ್ರ ಕಲಿಕೆ (Machine Learning) ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತಿದೆ. ನ.30 ರಂದು ಭೂಮಿಪೂಜೆ ನೆರವೇರಲಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು.
ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಡಿಯಾಲದಲ್ಲಿ ನಾರಾಯಣ ಭಟ್ ಉನ್ನತ ಶಿಕ್ಷಣ ಕೇಂದ್ರ ಸ್ಥಾಪನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಆಶಯದೊಂದಿಗೆ ಈ ಕೇಂದ್ರವನ್ನು ರೂಪಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆಯಂತಹ ಉದಯೋನ್ಮುಖ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಶೋಧನೆ, ನಾವೀನ್ಯತೆ ಹಾಗೂ ಹೊಸ ಆವಿಷ್ಕಾರಗಳಿಗೆ ಉತ್ತೇಜನ ನೀಡುವುದು ಕೇಂದ್ರದ ಪ್ರಮುಖ ಉದ್ದೇಶವಾಗಿದೆ ಎಂದರು.
ಮಡಿಯಾಲ ನಾರಾಯಣ ಭಟ್ ಅವರ ಶೈಕ್ಷಣಿಕ ಕೊಡುಗೆ ಮತ್ತು ಆದರ್ಶಗಳನ್ನು ಸ್ಮರಿಸುವ ಜತೆಗೆ, ಅವರ ಜನ್ಮ ಶತಾಬ್ದಿಯನ್ನು ಸಮಾಜಮುಖಿ ಕಾರ್ಯದ ಮೂಲಕ ಆಚರಿಸುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.