PM Narendra Modi: ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ, ವಿವಿಧ ಯೋಜನೆಗಳಿಗೆ ಚಾಲನೆ
PM Narendra Modi: ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ.
ಬೆಂಗಳೂರು: ಪಿಂಕ್ ಲೈನ್ ಮೆಟ್ರೋ, ವಂದೇ ಭಾರತ್ ರೈಲು ಮತ್ತು ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಅಭಿವೃದ್ಧಿಪಡಿಸಲಾದ 4 ರೈಲು ನಿಲ್ದಾಣಗಳ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ.
ಸದ್ಯ, ಎಸ್-ವ್ಯಾಸ ವಿಶ್ವವಿದ್ಯಾಲಯದ ಪ್ರಶಾಂತಿ ಕುಟೀರಂನ 50ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಿದ್ದಾರೆ.
ಮಧ್ಯಾಹ್ನ 12:45 ಗಂಟೆಗೆ ಹೊಸ ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಲಿದ್ದು, ತಾವರೆಕೆರೆಯಿಂದ ಐಐಎಂ ಮೆಟ್ರೋ ನಿಲ್ದಾಣದವರೆಗೆ ಪ್ರಯಾಣಿಸಲಿದ್ದಾರೆ. ಒಟ್ಟು ರೂ.15,600 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಆ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಾರಾಲಯವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ವಂದೇ ಭಾರತ್ ರೈಲಿಗೂ ಚಾಲನೆ:
ಯಶವಂತಪುರ-ಮಂಗಳೂರು-ಮಡಗಾಂವ್ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಜೊತೆಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಂಗಳೂರಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಇದೇ ರೈಲಿಗೆ ಮಧ್ಯಾಹ್ನ 2 ಗಂಟೆಗೆ ಹಸಿರು ನಿಶಾನೆ ತೋರಿಸಲಿದ್ದಾರೆ.
ಸಿಎಂ ಡಿ.ಕೆ.ಶಿವಕುಮಾರ್ ಸ್ವಾಗತ:
ನವದೆಹಲಿಯಿಂದ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ, ಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದರು.