ಉತ್ತಮ ಮೌಲ್ಯ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ: ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿಕೆ

Akshaya Degree College: ಪುತ್ತೂರಿನ ಅಕ್ಷಯ ಪದವಿ ಕಾಲೇಜಿನಲ್ಲಿ 'ದೃಷ್ಟಿ-2026' ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಉದ್ಘಾಟಿಸಿ, ದ.ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಅವರು ಮಾತನಾಡಿದರು.

Jul 24, 2026 - 12:49
ಉತ್ತಮ ಮೌಲ್ಯ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ: ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿಕೆ

ಪುತ್ತೂರು: ವಿದ್ಯಾರ್ಥಿಗಳು ಶಿಕ್ಷಣ, ಕುಟುಂಬ ಮತ್ತು ಭವಿಷ್ಯದ ಉದ್ಯೋಗದ ಕಡೆಗೆ ಹೆಚ್ಚಿನ ಗಮನಹರಿಸಿ, ಉತ್ತಮ ಮೌಲ್ಯ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿ ಪ್ರಜೆಗಳಾಗಿ ಬೆಳೆಯಬೇಕು ಎಂದು ದ.ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು.

ಅಕ್ಷಯ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ 'ದೃಷ್ಟಿ-2026' ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.

'ಹದಿಹರೆಯದಲ್ಲಿ ಪ್ರೀತಿ, ಕಾಮ, ದ್ವೇಷದಂತಹ ಭಾವನೆಗಳು ಬಹುಬೇಗ ಪ್ರಭಾವ ಬೀರುತ್ತವೆ. ಕ್ಷಣಿಕ ಸುಖಕ್ಕಾಗಿ ಜೀವನವಿಡಿ ಕೊರಗುವಂತಹ ಪರಿಸ್ಥಿತಿಯನ್ನು ತಂದುಕೊಳ್ಳಬೇಡಿ. ಯಾವುದೇ ರೀತಿಯಲ್ಲಿ ತೊಂದರೆಯಾದರೂ ಮನೆಯವರೊಂದಿಗೆ ಹಂಚಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಕಾನೂನಿನ ಸಲಹೆ ಪಡೆಯಬೇಕು. ತಪ್ಪು ಮಾಡಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪೋಷಕರು ಮಕ್ಕಳ ಅಗತ್ಯಗಳನ್ನು ಪೂರೈಸವುದರೊಂದಿಗೆ, ಅವರ ನಡೆ-ನುಡಿಗಳ ಮೇಲೂ ಗಮನಹರಿಸಬೇಕು' ಎಂದು ತಿಳಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ, 'ನಮ್ಮ ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತಿದ್ದು, ಅನೇಕ ಕುಟುಂಬಗಳಿಗೆ ಬದುಕಿನ ಆಧಾರವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಪ್ರತಿಯೊಂದು ಘಟನೆಗಳಿಂದ ಪಾಠ ಕಲಿತು, ಒಳ್ಳೆಯದನ್ನು ಆಯ್ಕೆ ಮಾಡಿಕೊಂಡು ಮುನ್ನಡೆಯಬೇಕು' ಎಂದು ಹೇಳಿದರು.

ಇತ್ತೀಚೆಗೆ 'ಅನ್ವೇಷಣಾ 3' ಹೆಸರಿನಡಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ಜಯಿಸಿದ ವಿದ್ಯಾರ್ಥಿಗಳಿಗೂ ಬಹುಮಾನ ವಿತರಿಸಲಾಯಿತು.

ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಅವರು, ಕಾಲೇಜಿನ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಶೈಕ್ಷಣಿಕ ನಿರ್ದೇಶಕ & ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಭಿಲಾಷ್ ಕ್ಷತ್ರಿಯ, ಸಂಸ್ಥೆಯಲ್ಲಿ ಲಭ್ಯವಿರುವ ವೃತ್ತಿಪರ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಬಗ್ಗೆ ವಿವರಿಸಿದರು.

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಹಾಗೂ ಕಾರ್ಯದರ್ಶಿ ಅಕ್ಷಯ್ ಉಪಸ್ಥಿತರಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಹರಿಶ್ಚಂದ್ರ ಸಿ ಅತಿಥಿಗಳ ಪರಿಚಯ ಮಾಡಿದರು. ಬಿಹೆಚ್ಎಸ್. ವಿಭಾಗದ ಮುಖ್ಯಸ್ಥ ಅವಿನಾಶ್ ವಂದಿಸಿದರು. ಕನ್ನಡ ಉಪನ್ಯಾಸಕಿ ರಶ್ಮಿತಾ ಎಸ್ ನಿರೂಪಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.