ಸತ್ಯಸಾಯಿ ಗ್ರಾಮದ ಸುವರ್ಣ ಮಹೋತ್ಸವಕ್ಕೆ ಆಳ್ವಾಸ್‌ನಿಂದ ಸಾಂಸ್ಕೃತಿಕ ವೈಭವ

Sathya Sai Grama: ಸತ್ಯಸಾಯಿ ಗ್ರಾಮದ 50 ವರ್ಷಗಳ ಸೇವಾ ಪಯಣದ ಸುವರ್ಣ ಮಹೋತ್ಸವದ ಅಂಗವಾಗಿ, ನ.26 ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500 ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು.

Nov 24, 2026 - 20:26
Nov 24, 2026 - 20:27
ಸತ್ಯಸಾಯಿ ಗ್ರಾಮದ ಸುವರ್ಣ ಮಹೋತ್ಸವಕ್ಕೆ ಆಳ್ವಾಸ್‌ನಿಂದ ಸಾಂಸ್ಕೃತಿಕ ವೈಭವ

ಚಿಕ್ಕಬಳ್ಳಾಪುರ: ಸತ್ಯಸಾಯಿ ಗ್ರಾಮದ 50 ವರ್ಷಗಳ ಸೇವಾ ಪಯಣದ ಸುವರ್ಣ ಮಹೋತ್ಸವದ ಅಂಗವಾಗಿ, ನ.26 ರಂದು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500 ಕಲಾವಿದರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದು, ಸಾಹಸ ಕ್ರೀಡೆಗಳ ಪ್ರದರ್ಶನವೂ ಇರಲಿದೆ. ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದ ಸಾಯಿ ಕೃಷ್ಣನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 20 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್‌ನ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ತಿಳಿಸಿದರು.

ಸತ್ಯಸಾಯಿ ಗ್ರಾಮದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಐದು ದಶಕಗಳ ಈ ಪಯಣ ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಮೂಲಕ ಸಮಾಜಕ್ಕೆ ಸಲ್ಲಿಸಿರುವ ಸೇವೆಯ ಮೈಲಿಗಲ್ಲಾಗಿದೆ. ಸುವರ್ಣ ಮಹೋತ್ಸವದಲ್ಲಿ ಪಾಲ್ಗೊಳ್ಳಲು ದೇಶದ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಚಿಕ್ಕಬಳ್ಳಾಪುರದ ಸ್ಥಳೀಯ ಜನರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮದಲ್ಲಿ ಪಾಲ್ಗೊಳ್ಳಬೇಕು' ಎಂದು ಆಹ್ವಾನಿಸಿದರು.

ನ.26 ರಂದು ಸಂಜೆ 5 ರಿಂದ 6ರವರೆಗೆ ಕಾರ್ಯಕ್ರಮದ ಮೊದಲ ಹಂತ ನಡೆಯಲಿದೆ. ಸಂಜೆ 6 ರಿಂದ ರಾತ್ರಿ 9 ರವರೆಗೆ ಎರಡನೇ ಹಂತದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಅವರ ನೇತೃತ್ವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇತರೆ ಸಂಭ್ರಮಾಚರಣೆಗಳು ನಡೆಯಲಿವೆ. ಕಲಾ ಪ್ರದರ್ಶನಗಳ ಜೊತೆಗೆ ಸಾಹಸ ಕ್ರೀಡೆಗಳು ಇರಲಿವೆ. ಸತ್ಯಸಾಯಿ ಗ್ರಾಮದ ಸುವರ್ಣ ಮಹೋತ್ಸವ, ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ 101ನೇ ಜನ್ಮೋತ್ಸವ ಹಾಗೂ ಮಡಿಯಾಲ ನಾರಾಯಣ ಭಟ್ ಅವರ ಜನ್ಮದಿನದ ಸಂಭ್ರಮಗಳು ಒಟ್ಟಿಗೆ ಸೇರಿರುವುದು ವಿಶೇಷ ಎಂದರು.

50 ಲಕ್ಷ ವಿದ್ಯಾರ್ಥಿಗಳಿಗೆ ಬೆಳಗಿನ ಉಪಾಹಾರ:

ಸಂಸ್ಥೆಯು ಶಿಕ್ಷಣ, ಆರೋಗ್ಯ ಮತ್ತು ಪೌಷ್ಟಿಕ ಆಹಾರ ಕ್ಷೇತ್ರಗಳಲ್ಲಿ ದೇಶದಾದ್ಯಂತ ಸೇವೆ ಸಲ್ಲಿಸುತ್ತಿದೆ. ಉಚಿತ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಶೇ 50ರಷ್ಟು ಹೆಣ್ಣುಮಕ್ಕಳಿದ್ದಾರೆ. ಅನ್ನಪೂರ್ಣ ಕಾರ್ಯಕ್ರಮದ ಮೂಲಕ ಕರ್ನಾಟಕದಾದ್ಯಂತ ಸುಮಾರು 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿದಿನ ಬೆಳಗಿನ ಉಪಾಹಾರ ಒದಗಿಸಲಾಗುತ್ತಿದೆ. ವಿವಿಧ ರಾಜ್ಯಗಳ ವೈದ್ಯರು ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವಿವರಿಸಿದರು.

ಗ್ರಾಮೀಣ ಮಕ್ಕಳಿಗೆ ಎಐ ತರಬೇತಿ ಕೇಂದ್ರ:

ಗ್ರಾಮೀಣ ಭಾಗದ ಮಕ್ಕಳಿಗೂ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಶಿಕ್ಷಣ ಮತ್ತು ತರಬೇತಿ ಒದಗಿಸುವ ಉದ್ದೇಶದಿಂದ ವಿಶ್ವೇಶ್ವರಯ್ಯ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕೇಂದ್ರ ಸ್ಥಾಪಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ವಿಶ್ವೇಶ್ವರಯ್ಯ ಅಪ್ಲೈಡ್ ಎಂಜಿನಿಯರಿಂಗ್ ಆ್ಯಂಡ್ ಸೈನ್ಸ್ ಸಂಸ್ಥೆ ಆರಂಭಿಸುವ ಉದ್ದೇಶವು ಇದೆ. ಸ್ಥಳೀಯ ಮಕ್ಕಳಿಗೆ ಆಧುನಿಕ ತಂತ್ರಜ್ಞಾನ ಶಿಕ್ಷಣದಲ್ಲಿ ವಿಶೇಷ ಅವಕಾಶ ಕಲ್ಪಿಸಲಾಗುವುದು. ಶಿಕ್ಷಣದ ಜತೆಗೆ ಆಧ್ಯಾತ್ಮ, ಸಂಗೀತ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಪ್ರಮಾಣಪತ್ರ ಕೋರ್ಸ್‌ಗಳನ್ನು ಆರಂಭಿಸುವ ಚಿಂತನೆಯಿದೆ. ಮುಂದಿನ ದಿನಗಳಲ್ಲಿ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾಪನೆಗೂ ಪ್ರಯತ್ನಿಸಲಾಗುವುದು. ಈಗಾಗಲೇ ವಿವಿಧ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಮೌಲ್ಯಾಧಾರಿತ ಶಿಕ್ಷಣದ ಭಾಗವಾಗಿ ವಿದ್ಯಾರ್ಥಿಗಳೇ ಕಾರ್ಯಾಗಾರಗಳನ್ನು ನಡೆಸುತ್ತಿದ್ದಾರೆ ಎಂದರು.

ಪ್ರಶಾಂತಿ ಬಾಲಮಂದಿರ ಟ್ರಸ್ಟ್‌ನ ಅಧ್ಯಕ್ಷ ಬಿ.ಎನ್.ನರಸಿಂಹಮೂರ್ತಿ, ಸತ್ಯಸಾಯಿ ಲೋಕಸೇವಾ ಗುರುಕುಲಂ ಮುದ್ದೇನಹಳ್ಳಿಯ ಪ್ರಧಾನ ಪಾಲಕ ನಿಕೇತನ್ ಉಪಸ್ಥಿತರಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.