ಬರ, ಕಸ್ತೂರಿ ರಂಗನ್‌ ವರದಿ ಕುರಿತ ಚರ್ಚೆಗೆ 3 ದಿನ ವಿಶೇಷ ಅಧಿವೇಶನ: ಡಿಸಿಎಂ

Dr.G.Parameshwara: ಬರ, ಕಸ್ತೂರಿ ರಂಗನ್‌ ವರದಿ ಕುರಿತ ಚರ್ಚೆಗೆ 3 ದಿನಗಳ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಡಿಸಿಎಂ ಡಾ.ಜಿ.ಪರಮೇಶ್ವರ ಹೇಳಿದರು.

Sep 19, 2026 - 13:05
ಬರ, ಕಸ್ತೂರಿ ರಂಗನ್‌ ವರದಿ ಕುರಿತ ಚರ್ಚೆಗೆ 3 ದಿನ ವಿಶೇಷ ಅಧಿವೇಶನ: ಡಿಸಿಎಂ

ಬೆಂಗಳೂರು: ರಾಜ್ಯದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಮತ್ತು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರ ಹಿತವೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ವಿಪಕ್ಷದವರು ಪ್ರತಿಯೊಂದು ವಿಷಯವನ್ನು ರಾಜಕೀಯ ದೃಷ್ಟಿಯಿಂದ ನೋಡುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿಸಿಎಂ ಡಾ.ಜಿ.ಪರಮೇಶ್ವರ (Dr.G.Parameshwara) ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರೊಂದಿಗೆ ಇಂದು ಮಾತನಾಡಿದರು. ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಯ ಕುರಿತು ಸಮಗ್ರವಾಗಿ ಚರ್ಚಿಸಿ, ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ರೈತರನ್ನು ಸಂಕಷ್ಟದಿಂದ ಹೊರತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.

ಬರದ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕಿದೆ: 

ಇಡೀ ರಾಜ್ಯದಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಯಾಗಬೇಕು. ಬರ ಪರಿಹಾರಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು, ಕೇಂದ್ರ ಸರ್ಕಾರದಿಂದ ಯಾವ ರೀತಿಯ ನೆರವು ಕೇಳಬೇಕು ಎಂಬುದರ ಕುರಿತು ಒಗ್ಗಟ್ಟಿನಿಂದ ಚರ್ಚಿಸಬೇಕಿದೆ. ಇದೇ ಉದ್ದೇಶದಿಂದ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಬರ ಪರಿಸ್ಥಿತಿಯ ಜೊತೆಗೆ ಕಸ್ತೂರಿರಂಗನ್ ವರದಿಯ ಕುರಿತು ಚರ್ಚೆ ಮಾಡಲಾಗವುದು ಎಂದು ತಿಳಿಸಿದರು.  

ವಿರೋಧ ಪಕ್ಷಗಳು ಜನರ ಸಮಸ್ಯೆಗಳಿಗೆ, ಸಂಬಂಧಿಸಿದ ವಿಷಯಗಳ ಚರ್ಚೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಸರ್ಕಾರ ವಿರೋಧಿಸುವುದಿಲ್ಲ. ಆದರೆ ಪ್ರತಿಯೊಂದಕ್ಕೂ ಸಮಯ ಹಾಗೂ  ಸಂದರ್ಭವಿದ್ದು, ಎಲ್ಲ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸೂಕ್ತವಲ್ಲ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು. 

ಕರಾವಳಿ ಅಭಿವೃದ್ಧಿಗೆ ವಿಶೇಷ ಆದ್ಯತೆ:

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ, ರಸ್ತೆ, ಸೇತುವೆ ಹಾಗೂ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದರು.

ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿ 61 ವಿಷಯಗಳಿಗೆ ಸಂಬಂಧಿಸಿದ ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದೇವೆ. ಕರಾವಳಿ ಭಾಗದ ಜನರಿಗೆ ನೇರವಾಗಿ ಅನುಕೂಲವಾಗುವ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದು ಸರ್ಕಾರದ ಉದ್ದೇಶವಾಗಿದೆ. ಜನಸಮುದಾಯಕ್ಕೆ ಅನುಕೂಲ ಕಲ್ಪಿಸುವುದೇ ನಮ್ಮ ಪ್ರಥಮ ಆದ್ಯತೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸಲಾಗುವುದು. ನಂತರ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಹಂತ ಹಂತವಾಗಿ ನಡೆಸಲಾಗುವುದು ಎಂದರು.

72 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ:

ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದ್ದು, ಒಟ್ಟು 72 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 900ಕ್ಕೂ ಹೆಚ್ಚು ಸರ್ವೇಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಲಾಖೆಗಳ ಅವಶ್ಯಕತೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.