ವಿವೇಕಾನಂದ ಕಾಲೇಜು: ವಿವೇಕ ಸ್ಮೃತಿ ಕಾರ್ಯಕ್ರಮ
Vivekananda College: ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ 'ವಿವೇಕ ಸ್ಮೃತಿ' ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ನಮ್ಮಲ್ಲಿರುವ ತಪ್ಪು ವಿಚಾರಗಳನ್ನು ತೊಡೆದುಹಾಕುವುದೇ ಆಧ್ಯಾತ್ಮ. ತರ್ಕದ ಭಾಷೆಯಲ್ಲಿ ಆಧ್ಯಾತ್ಮವನ್ನು ಜಗತ್ತಿನ ಮುಂದಿಡಬೇಕು. ಆಗ ಜಗತ್ತಿಗೆ ಆಧ್ಯಾತ್ಮದ ಸಾರವನ್ನು ಪರಿಣಾಮಕಾರಿಯಾಗಿ ತಲುಪಿಸಲು ಸಾಧ್ಯ ಎಂದು ಮಣಿಪಾಲದ ಟಿಎಪಿಎಐನ ಪ್ರೊ. ನಂದನ್ ಪ್ರಭು ಹೇಳಿದರು.
ಇಲ್ಲಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರ, ವಿವೇಕಾನಂದ ಸಂಶೋಧನಾ ಕೇಂದ್ರ, ಐಕ್ಯೂಎಸಿ ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ನಡೆದ 'ವಿವೇಕ ಸ್ಮೃತಿ ಸಂಚಿಕೆ-34' ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅವರು ಮಾತನಾಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ವಾಮಿ ವಿವೇಕಾನಂದರ ಕೊಡುಗೆ ಅಪಾರವಾಗಿದೆ. ವಿಜ್ಞಾನ ಕ್ಷೇತ್ರದಲ್ಲಿ ನಿರಂತರವಾಗಿ ಹೊಸ ಅನ್ವೇಷಣೆಗಳು ನಡೆಯುತ್ತಿದ್ದು, ಜಗತ್ತಿನಲ್ಲಿ ಮೂಡಿಬರುವ ವಿನೂತನ ವಿಚಾರಗಳನ್ನು ನಮ್ಮ ಕಲಿಕೆಯಲ್ಲಿಯೂ ಅಳವಡಿಸಿಕೊಳ್ಳಬೇಕು. ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಕೃತಕ ಬುದ್ಧಿಮತ್ತೆಯೊಂದಿಗೆ ನಮ್ಮ ಹೊಸ ಆಲೋಚನೆಗಳನ್ನು ಬಳಸಿಕೊಳ್ಳುವ ಮೂಲಕ ಬದಲಾವಣೆ ತರಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ ನಿರ್ದೇಶಕ ವೇದ ಲಕ್ಷ್ಮೀಕಾಂತ ಆಚಾರ್ಯ ಮಾತನಾಡಿ, ಸ್ವಾಮಿ ವಿವೇಕಾನಂದರು ಕೇವಲ ಆಧ್ಯಾತ್ಮಿಕ ಗುರುಗಳಾಗಿರದೆ, ಭಾರತದ ಸಂಸ್ಕೃತಿ, ಆಧ್ಯಾತ್ಮಿಕ ಶಕ್ತಿ ಹಾಗೂ ಮಾನವೀಯತೆಯನ್ನು ಜಗತ್ತಿಗೆ ಪರಿಚಯಿಸಿದ ಮಹಾನ್ ವ್ಯಕ್ತಿಯಾಗಿದ್ದರು. ಯುವಜನತೆಯೇ ದೇಶದ ಶಕ್ತಿ ಎಂಬುದು ಅವರ ನಂಬಿಕೆಯಾಗಿತ್ತು. ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ತಮ ಜೀವನ ರೂಪಿಸಿಕೊಳ್ಳುವುದರ ಜೊತೆಗೆ ದೇಶದ ಅಭಿವೃದ್ಧಿಗೆ ತನ್ನ ಕೊಡುಗೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪದವಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ವರದರಾಜ್ ಚಂದ್ರಗಿರಿ, ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಹಾಗೂ ಕಾಲೇಜಿನ ಭಾರತೀಯ ಸಂಸ್ಕೃತಿ ಮತ್ತು ಲಲಿತಕಲೆಗಳ ಅಧ್ಯಯನ ಕೇಂದ್ರದ ಸಂಯೋಜಕಿ ಡಾ.ವಿದ್ಯಾ ಎಸ್ ಉಪಸ್ಥಿತರಿದ್ದರು.
ವಿವೇಕಾನಂದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ವಿಜಯ ಸರಸ್ವತಿ ಸ್ವಾಗತಿಸಿದರು. ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಜಯ್ ಶಾಸ್ತ್ರಿ ವಂದಿಸಿದರು. ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿದ್ಯಾರ್ಥಿ ಕೃಷ್ಣ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.