ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

Vivekananda Engineering College: ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ 'ದೀಪಾವಳಿ'ವನ್ನು ಆಚರಿಸಲಾಯಿತು.

Nov 21, 2026 - 12:47
Nov 21, 2026 - 12:48
ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

ಪುತ್ತೂರು: ದೀಪಾವಳಿ ಹಬ್ಬವು ಜಗತ್ತಿನಾದ್ಯಂತ ಅತ್ಯಂತ ಹೆಚ್ಚು ಜನರು ಭಾಗವಹಿಸಿ, ಸಂಭ್ರಮಿಸುವ ಹಬ್ಬವಾಗಿದೆ ಎಂದು ಸುಬ್ರಹ್ಮಣ್ಯದ ಕುಮಾರಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಸಂಕೀರ್ಥ್ ಹೆಬ್ಬಾರ್ ಹೇಳಿದರು.

ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ದೀಪಾವಳಿ ಆಚರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿ, ಆಚಾರ-ವಿಚಾರಗಳಿಗೆ ಮಾರುಹೋಗಿರುವ ವಿದೇಶಿಯರು ನಮ್ಮಿಂದ ಸಾಕಷ್ಟು ಕಲಿತಿದ್ದಾರೆ ಹಾಗೂ ಕಲಿಯುತ್ತಿದ್ದಾರೆ. ನಮ್ಮ ಶಕ್ತಿ ಮತ್ತು ಸಾಮರ್ಥ್ಯದ ಅರಿವಿದ್ದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ಗೌರವ ಅತಿಥಿಯಾಗಿ ಆಗಮಿಸಿದ್ದ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಹೆಚ್.ಕೆ. ಪ್ರಕಾಶ್ ಮಾತನಾಡಿ, ಬದುಕಿನ ಅನಿವಾರ್ಯತೆಗಳು ಮಾನವನ ಜೀವನವನ್ನು ರೂಪಿಸುತ್ತವೆ. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ. ಆ ಪ್ರತಿಭೆಗೆ ಸೂಕ್ತ ವೇದಿಕೆ ದೊರೆತಾಗ ಜೀವನದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದರು.

ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಹನುಮಗಿರಿ ಮೇಳದ ಖ್ಯಾತ ಭಾಗವತ ಚಿನ್ಮಯ ಭಟ್ ಕಲ್ಲಡ್ಕ ಮಾತನಾಡಿ, ತಾವು ಕಲಿತ ಕಾಲೇಜಿಗೆ ಅತಿಥಿಯಾಗಿ ಆಗಮಿಸಿರುವುದು ಸಂತೋಷ ತಂದಿದೆ. ಭವಿಷ್ಯದ ಬಗ್ಗೆ ಗಮನಹರಿಸುವುದರ ಜೊತೆಗೆ ಕಾಲೇಜು ಜೀವನದ ಸವಿಯನ್ನು ಅನುಭವಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ ಡಿ ಕಲ್ಲಾಜೆ ಮಾತನಾಡಿ, ದೀಪಾವಳಿ ವಿಶ್ವದಾದ್ಯಂತ ಭಾರತದ ಸಂಸ್ಕೃತಿಯನ್ನು ಬಿಂಬಿಸುವ ಹಬ್ಬವಾಗಿದೆ. ಈ ಹಬ್ಬದ ಆಚರಣೆಯಲ್ಲಿ ಬಡವ-ಬಲ್ಲಿದ ಎಂಬ ಭೇದವಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಹಬ್ಬವನ್ನು ಆಚರಿಸುತ್ತಾರೆ. ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಸಮಾಜಕ್ಕೆ, ತಂದೆ-ತಾಯಿಗೆ ಹಾಗೂ ಶಿಕ್ಷಣ ನೀಡಿದ ಸಂಸ್ಥೆಗೆ ಗೌರವ ತರುವಂತೆ ವಿದ್ಯಾರ್ಥಿಗಳು ಬೆಳೆಯಬೇಕು ಎಂದರು.

ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಅರವಿಂದ್ ವಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರೊ.ಶ್ರೀನಿಧಿ ಎ ಮತ್ತು ಪ್ರೊ.ನಿಶಾ ಜಿ.ಆರ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಭೆ, ನಿರ್ದೇಶಕರಾದ ಮನೋಜ್ ಕುಮಾರ್, ಸುಜಿತ್ ಕುಮಾರ್, ವೇದಾ ಲಕ್ಷ್ಮೀಕಾಂತ್ ಆಚಾರ್ಯ ಹಾಗೂ ರಕ್ಷಾ ಪ್ರಭು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರೊ.ನಿಶಾ ಜಿ.ಆರ್ ಸ್ವಾಗತಿಸಿದರು. ಪ್ರೊ.ನಿಧಿ ವಂದಿಸಿದರು. ಪ್ರೊ.ನೀಮಾ ಹೆಚ್. ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ಬಳಿಕ, ಕಾಲೇಜಿನ ಭೂಮಿಕಾ ಕಲಾ ಸಂಘದ ವಿದ್ಯಾರ್ಥಿಗಳು 'ದೀಪೋತ್ಸವ' ಎಂಬ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮವನ್ನು ಪ್ರಸ್ತುತಪಡಿಸಿದರು. ಕೊನೆಯಲ್ಲಿ ಸುಡುಮದ್ದು ಪ್ರದರ್ಶನ ನಡೆಯಿತು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.