ವೇಟ್‌ಲಿಫ್ಟಿಂಗ್ ಸ್ಪರ್ಧೆ: ರಾಮಕುಂಜ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ - ರಾಷ್ಟ್ರಮಟ್ಟಕ್ಕೆ ಆಯ್ಕೆ
Weightlifting Competition: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನ.14 ರಿಂದ 17 ರವರೆಗೆ ನಡೆದ 2026ರ ಐದನೇ ಮಿನಿ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ, ರಾಮಕುಂಜದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನ.14 ರಿಂದ 17 ರವರೆಗೆ ನಡೆದ 2026ರ ಐದನೇ ಮಿನಿ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ, ರಾಮಕುಂಜದ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಜೂನಿಯರ್ಸ್ ರಾಜ್ಯಮಟ್ಟದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿನಿ, ಕೊಯಿಲ ಗ್ರಾಮದ ಕಲ್ಕಾಡಿ ಮನೆ ಹರಿಶ್ಚಂದ್ರ ಮತ್ತು ಉಷಾ ದಂಪತಿಯ ಪುತ್ರಿ ಯಶಿಕ ಹೆಚ್ ಸನಿಲ್ ಅವರು 61 ಕೆಜಿ ವಿಭಾಗದಲ್ಲಿ ಬೆಳ್ಳಿಯ ಪದಕ ಜಯಿಸಿ, ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಆಲಂಕಾರು ಗ್ರಾಮದ ಕಂದ್ಲಾಜೆ ಮನೆ ಗಣೇಶ ದೇವಾಡಿಗ ಮತ್ತು ಅಶ್ವಿನಿ ದಂಪತಿಯ ಪುತ್ರ ವಿಶ್ವಾಸ್ ದೇವಾಡಿಗ ಅವರು 60 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ, ಶಾಲೆಗೆ ಕೀರ್ತಿ ತಂದಿದ್ದಾರೆ.
ಪೆರಾಬೆ ಗ್ರಾಮದ ಕುಂಟ್ಯಾನ ಮನೆ ಮೋನಪ್ಪ ಗೌಡ ಮತ್ತು ಮೋಹಿನಿ.ಕೆ ದಂಪತಿಯ ಪುತ್ರಿ ಭುವಿ.ಕೆ ಅವರು 49 ಕೆಜಿ ವಿಭಾಗದಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಗಟ್ಟೆಯ ವೀರಭದ್ರಪ್ಪ ಮತ್ತು ಜಯಶ್ರೀ ದಂಪತಿಯ ಪುತ್ರ ಚರಣ್ ಅವರು 65 ಕೆಜಿ ವಿಭಾಗದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ, ತಮ್ಮ ಕ್ರೀಡಾ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ಶಾಲೆಯ ದೈಹಿಕ ಶಿಕ್ಷಕಿ ಪ್ರಫುಲ್ಲ ರೈ ಅವರ ಶ್ರಮ ಮತ್ತು ಪ್ರೋತ್ಸಾವು ಪ್ರಶಂಸನೀಯವಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳು, ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಕಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ, ಮುಂದಿನ ಕ್ರೀಡಾ ಸ್ಪರ್ಧೆಗಳಲ್ಲಿಯೂ ಇನ್ನಷ್ಟು ಉತ್ತಮ ಸಾಧನೆ ಮಾಡಲೆಂದು ಶುಭ ಹಾರೈಸಿದ್ದಾರೆ.